ಬಳ್ಳಾರಿ: ಸಮಾಜದಲ್ಲಿ ಶೋಷಣೆಗೊಳಗಾದ ಪರಿಶಿಷ್ಟ ಸಮುದಾಯ ವರ್ಗದವರ ಅಭಿವೃದ್ಧಿಗೆ ಅವರಿಗಾಗಿಯೇ ಇರುವ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸುವ ಮೂಲಕ ಪರಿಶಿಷ್ಟ ಸಮುದಾಯದ ಕಟ್ಟ ಕಡೆಯ ವ್ಯಕ್ತಿಗೂ ಬದುಕು ರೂಪಿಸುವ ಕೆಲಸವಾಗಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು.
ಅತ್ಯಂತ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದೀರಿ; ಸಾಮಾಜಿಕ ಕಳಕಳಿಯ ಜವಾಬ್ದಾರಿ ಹೊಂದಬೇಕು. ಪರಿಶಿಷ್ಟ ಸಮುದಾಯದವರಿಗೂ ಸಾಮಾಜಿಕ ಜಗತ್ತಿನಲ್ಲಿ ಸಹಬಾಳ್ವೆ ನಡೆಸಲು ಅವಕಾಶ ನೀಡಬೇಕು. ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ಇಲಾಖೆ ಕಚೇರಿಗಳಲ್ಲಿಯೂ ಮೀಸಲಾತಿ ಉದ್ಯೋಗಾವಕಾಶ ಕಲ್ಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.
ಜಿಲ್ಲೆಯಲ್ಲಿನ ಮಾಜಿ ದೇವದಾಸಿಯರ ಪುನರ್ವಸತಿಗೆ ಕ್ರಮ ವಹಿಸಬೇಕು. ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನೀಡಬೇಕು. ನಿವೇಶನ ಇಲ್ಲದಿದ್ದಲ್ಲಿ ಸರ್ಕಾರವೇ ಖರೀದಿಸಿ ಮಾಜಿ ದೇವದಾಸಿಯರಿಗೆ ನೀಡಬೇಕು. ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು. ಜಿಲ್ಲೆಯಲ್ಲಿ ದೇವದಾಸಿಯರ ಏಳ್ಗೆಗಾಗಿ ರೂಪಿಸಿದ ಕಾರ್ಯಯೋಜನೆಗಳ ಬಗ್ಗೆ ಪೂರಕ ಮಾಹಿತಿಯೊಂದಿಗೆ ಸಮಿತಿಗೆ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.2011ರ ಜನಗಣತಿ ಪ್ರಕಾರ ಬಳ್ಳಾರಿ ಜಿಲ್ಲೆಯಲ್ಲಿನ ಒಟ್ಟು 14,00,970 ಜನಸಂಖ್ಯೆ ಪೈಕಿ ಪರಿಶಿಷ್ಟ ಜಾತಿಯಲ್ಲಿ 1,33,180 ಪುರುಷರು ಮತ್ತು 1,34,213 ಮಹಿಳೆಯರು ಇದ್ದಾರೆ. ಪರಿಶಿಷ್ಟ ಪಂಗಡದಲ್ಲಿ 1,31,119 ಪುರುಷರು ಮತ್ತು 1,31,553 ಮಹಿಳೆಯರು ಇದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 65 ದೌರ್ಜನ್ಯ ಪ್ರಕರಣಗಳು ನಡೆದಿದ್ದು, 127 ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಕೃಷಿ, ಪಶು ಸಂಗೋಪನಾ, ಇಂಧನ, ಮೀನುಗಾರಿಕೆ, ಸಹಕಾರ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಡಿಯ ಕಾರ್ಯಕ್ರಮಗಳ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು.
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಪ್ರಗತಿ ಪರಿಶೀಲನೆಯಲ್ಲಿ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅವರು ಪಾಲ್ಗೊಂಡು ಅಧಿಕಾರಿಗಳ ಜೊತೆ ಚರ್ಚಿಸಿದರು.