ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ನಗರ, ಜಿಲ್ಲೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಆಯಾ ಭಾಗದ ಶಾಸಕರು ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಸದನದಲ್ಲಿ ಸಮರ್ಥವಾಗಿ ಮಂಡಿಸಲು ಅವಕಾಶ ನೀಡಬೇಕು. ಒಂದು ವಿಷಯವನ್ನೇ ನಾಲ್ಕು ದಿನ ಚರ್ಚಿಸಿ ಕಲಾಪದ ಸಮಯ ವ್ಯರ್ಥ ಮಾಡಬಾರದು. ವಿಧಾನಸಭಾಧ್ಯಕ್ಷರು ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. ಮೊದಲ ದಿನದ ಭಾಷಣದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚಿಸುವುದಾಗಿ ಹೇಳಿದರೂ, ನಂತರದ ದಿನಗಳಲ್ಲಿ ದಕ್ಷಿಣ ಕರ್ನಾಟಕದ ವಿಷಯಗಳೇ ಹೆಚ್ಚು ಚರ್ಚೆಯಾಗುತ್ತವೆ. ದಕ್ಷಿಣ ಕರ್ನಾಟಕದ ಶಾಸಕರು ಕೂಡ ಪೂರ್ಣ ಪ್ರಮಾಣದಲ್ಲಿ ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿಂದೆ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ₹15ರಿಂದ ₹20 ಕೋಟಿ ವಿಶೇಷ ಅನುದಾನ ಬಿಡುಗಡೆಯಾಗುತ್ತಿತ್ತು. ಆದರೆ, ಕಳೆದ 3 ವರ್ಷಗಳಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರು ಉತ್ತರ ಕ್ಷೇತ್ರದಲ್ಲಿ ಮಾತ್ರ ರಸ್ತೆ ಗುಂಡಿಗಳ ದುರಸ್ತಿ ಕಾರ್ಯ ಕೈಗೊಳ್ಳುತ್ತಿದ್ದಾರೆ. ದಕ್ಷಿಣ ಕ್ಷೇತ್ರದ ರಸ್ತೆಗಳು ಅವರ ಕಣ್ಣಿಗೆ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.ಗಣೇಶೋತ್ಸವದ ಸಂದರ್ಭದಲ್ಲಿಯೇ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಮುಂದಿನ 8 ದಿನಗಳಲ್ಲಿ ಗುಂಡಿಗಳನ್ನು ಮುಚ್ಚದಿದ್ದರೆ ಅಧಿವೇಶನಕ್ಕೆ ಬರುವ ಸಚಿವರು ಸಂಚರಿಸುವ ರಸ್ತೆಯಲ್ಲಿ ದೊಡ್ಡ ಗುಂಡಿ ತೆಗೆದು ಸಸಿಗಳನ್ನು ನೆಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಅಂತಾರಾಷ್ಟ್ರೀಯ ಕಂಪನಿ ಎಂದು ಹೇಳಿಕೊಳ್ಳುವ ಎಲ್ ಆ್ಯಂಡ್ ಟಿ, ನಗರದಲ್ಲಿ ಗುತ್ತಿಗೆದಾರರಿಗಿಂತಲೂ ಕಳಪೆ ಮಟ್ಟದ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ತಮ್ಮ ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ₹20 ಕೋಟಿ ಮಂಜೂರಾಗಿತ್ತು. ಅದರಲ್ಲಿ ₹5 ಕೋಟಿ ಬಿಡುಗಡೆಯಾದ ಬಳಿಕ ಕಾಮಗಾರಿಗಳು ಆರಂಭವಾಗಿದ್ದವು. ಉಳಿದ ಹಣ ಬಿಡುಗಡೆಯಾಗದ ಕಾರಣ ಸುಮಾರು 50 ಸಮಾಜಗಳಿಗೆ ಸೇರಿದ 120 ದೇವಸ್ಥಾನಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಇತ್ತೀಚೆಗೆ ಆಯಾ ಸಮಾಜಗಳ ಮುಖಂಡರ ಸಭೆ ನಡೆಸಿದಾಗ, ಅಧಿವೇಶನದೊಳಗೆ ಹಣ ಬಿಡುಗಡೆ ಮಾಡದಿದ್ದರೆ ಅಧಿವೇಶನಕ್ಕೆ ಬರುವ ಸಚಿವರಿಗೆ ಮಹಿಳೆಯರು ಕಪ್ಪು ಬಾವುಟ ಪ್ರದರ್ಶಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಹಣ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು. ಇಲ್ಲದಿದ್ದರೆ ಹೋರಾಟಕ್ಕೆ ಬೆಂಬಲ ನೀಡಬೇಕಾಗುತ್ತದೆ ಎಂದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಹಾನಗರ ಪಾಲಿಕೆಗೆ ವಾರ್ಷಿಕ ₹100 ಕೋಟಿ ಅನುದಾನ ನೀಡಲಾಗುತ್ತಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕವೂ ಪ್ರತಿ ಮಹಾನಗರ ಪಾಲಿಕೆಗೆ ₹100 ಕೋಟಿ ನೀಡುವುದಾಗಿ ಘೋಷಿಸಿದ್ದರು. ಆದರೆ, ಮೂರೂವರೆ ವರ್ಷ ಕಳೆದರೂ ಆ ಅನುದಾನ ತಮ್ಮ ಕ್ಷೇತ್ರಕ್ಕೆ ತಲುಪಿಲ್ಲ ಎಂದು ಆರೋಪಿಸಿದರು.
ಬೆಳಗಾವಿಯ 20 ಪ್ರಮುಖರ ನಿಯೋಗದೊಂದಿಗೆ ದೆಹಲಿಗೆ ತೆರಳಲು ನಿರ್ಧರಿಸಲಾಗಿದೆ. ಗೃಹ, ರಕ್ಷಣಾ ಮತ್ತು ಹಣಕಾಸು ಸೇರಿದಂತೆ ವಿವಿಧ ಇಲಾಖೆಗಳ ಸಚಿವರ ಭೇಟಿಗೆ ಸಮಯ ಕೋರಲಾಗಿದೆ. ಮುಂದಿನ ವಾರ ವಿಷನ್ 2050 ಕಾರ್ಯಕ್ರಮ ಆಯೋಜಿಸಿ, ವಿವಿಧ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ ಆದ್ಯತೆಯ ಪಟ್ಟಿ ಸಿದ್ಧಪಡಿಸಲಾಗುವುದು. ಬಳಿಕ ಜಿಲ್ಲಾಧಿಕಾರಿ, ಮುಖ್ಯಮಂತ್ರಿ ಹಾಗೂ ಕೇಂದ್ರದ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಅಭಯ ಪಾಟೀಲ ತಿಳಿಸಿದರು.