ಜಿಲ್ಲಾ ಮಟ್ಟದ ಉಪಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಕನ್ನಡಪ್ರಭ ವಾರ್ತೆ ಕೊಪ್ಪಳಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಪಂ ಆಡಳಿತಾಧಿಕಾರಿ ಕೆ.ಪಿ. ಮೋಹನ್ ರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಕುಡಿಯುವ ನೀರು ಸರಬರಾಜು ಸಮಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆಯುಷ್ ಇಲಾಖೆಗಳ ಜಿಲ್ಲಾ ಆರೋಗ್ಯ ಸಮನ್ವಯ ಸಮಿತಿಯ, ಜಿಲ್ಲಾ ಮಟ್ಟದ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಮಿತಿ ಮತ್ತು ಕೊಪ್ಪಳ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸೌಲಭ್ಯ ಅಭಿವೃದ್ಧಿ ಸಮಿತಿ ಸೇರಿದಂತೆ ಜಿಲ್ಲಾ ಮಟ್ಟದ ಉಪಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲು ಹಾಗೂ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಅನುಕೂಲವಾಗುವಂತೆ ವಿವಿಧ ಇಲಾಖೆಗಳನ್ನೊಳಗೊಂಡ ಜಿಲ್ಲಾ ಮಟ್ಟದ ಉಪಸಮಿತಿ ರಚಿಸಲಾಗಿದ್ದು, ಎಲ್ಲ ಸಮಿತಿಗಳು ತಮ್ಮ ಹಂತದಲ್ಲಿ ಪ್ರತಿ ಮಾಹೆಯಲ್ಲಿ ಕಡ್ಡಾಯವಾಗಿ ಸಭೆ ಮಾಡಬೇಕು. ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಗೆ ವೇಗ ಸಿಗುವಂತಾಗುತ್ತದೆ. ಅಲ್ಲದೆ ಇಲಾಖೆಗಳಿಂದ ಸಾರ್ವಜನಿಕರಿಗೆ ನೀಡಲಾಗುವ ಸೇವೆಗಳು, ಯೋಜನೆ ಮತ್ತು ಇತರೆ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆ ಎಲ್ಲ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿದೆಯೇ ಎಂದು ಪ್ರಶ್ನಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಮಳೆಗಾಲದ ಹಿನ್ನೆಲೆ ಪೈಪ್‌ಲೈನ್ ಹಾಗೂ ಬೋರವೆಲ್‌ಗಳಲ್ಲಿ ಕಲುಷಿತ ನೀರು ಹೋಗದಂತೆ ನೋಡಿಕೊಳ್ಳಬೇಕು. ಯಾವುದೇ ರೀತಿಯ ದುರಸ್ತಿಗಳಿದ್ದಲ್ಲಿ ತ್ವರಿತವಾಗಿ ಕ್ರಮಕೈಗೊಳ್ಳಬೇಕು. ಜಾಕ್ವೆಲ್ ಹಾಗೂ ನೀರು ಸರಬರಾಜು ಮೂಲಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನಾ ವರದಿ ಸಲ್ಲಿಸಬೇಕು. ನೀರು ಪೂರೈಕೆಗೂ ಮುನ್ನ ಪರೀಕ್ಷೆ ಕಡ್ಡಾಯವಾಗಿ ಮಾಡಿ. ಪರೀಕ್ಷೆಯಲ್ಲಿ ಯಾವ ನೀರು ಕುಡಿಯಲು ಯೋಗ್ಯವಿಲ್ಲವೋ ಅಂತಹ ನೀರು ಸರಬರಾಜು ಬಂದ್ ಮಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಕೆರೆ, ಕೊಳವೆ ಬಾವಿಗಳು ಸೇರಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 3000 ಕುಡಿಯುವ ನೀರು ಸರಬರಾಜಿನ ಮೂಲಗಳಿದ್ದು, ಪ್ರತಿ ಮಾಹಿಯಲ್ಲಿ 1000 ನೀರು ಪರೀಕ್ಷೆ ಕೈಗೊಳ್ಳಲಾಗುತ್ತಿದೆ. ಪರೀಕ್ಷೆಯಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಅಥವಾ ಕಲುಷಿತ ನೀರು ಎಂದು ದೃಢಪಟ್ಟ ತಕ್ಷಣವೇ ಅಂತಹ ನೀರು ಸರಬರಾಜನ್ನು ನಿಲ್ಲಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ.64ರಷ್ಟು ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಬೇಕು. ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶ ಕುಸಿದಿರುವುದಕ್ಕೆ ಕಾರಣ, ಕಳೆದ ನಾಲ್ಕು ವರ್ಷಗಳ ಸಾಧನೆಯ ವಿವರದೊಂದಿಗೆ ಸೂಕ್ತ ವರದಿ ಸಲ್ಲಿಸುವಂತೆ ಮೋಹನ್ ರಾಜ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕಾವ್ಯರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಕಿಮ್ಸ್ ನಿರ್ದೇಶಕ ಡಾ. ವೈಜನಾಥ ಇಟಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.