ಬೀದರ್ ಉಸ್ತುವಾರಿ ಸಚಿವರ ಕಚೇರಿಗೆ ಎಬಿವಿಪಿ ಕಾರ್ಯಕರ್ತರಿರಂದ ಮುತ್ತಿಗೆಕನ್ನಡಪ್ರಭ ವಾರ್ತೆ ಬೀದರ್
ರಾಜ್ಯ ಹಾಗೂ ದೇಶದ ಅಭಿವೃದ್ಧಿ ಶಿಕ್ಷಣ ಕ್ಷೇತ್ರದ ಮೇಲೆ ಅವಲಂಬಿತವಾಗಿದ್ದು, ಈ ಕ್ಷೇತ್ರಕ್ಕೆ ಹೆಚ್ಚಿನ ಸೌಲಭ್ಯ ಒದಗಿಸುವುದು ಸರ್ಕಾರಗಳ ಮೊದಲ ಆಧ್ಯತೆಯಾಗಬೇಕು ಎಂದು ಎಬಿವಿಪಿ ಆಗ್ರಹಿಸಿದೆ. ಶುಕ್ರವಾರ ನಗರದ ಡಾ.ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ತೆರಳಿ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದ ಕಾರ್ಯಕರ್ತರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸಮಯ ಸರಿಯಾಗಿ ಬಸ್ ಪಾಸ್ ವಿತರಣೆ ಮಾಡುತ್ತಿಲ್ಲ ಹಾಗೂ ಸ್ತ್ರೀ ಶಕ್ತಿ ಯೋಜನೆಯಿಂದ ಹೆಚ್ಚು ಮಹಿಳೆಯರು ಬಸ್‌ಗಳಲ್ಲಿ ಓಡಾಟ ಮಾಡುತ್ತಿರುವದರಿಂದ ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡದೇ ಇರುವುದರಿಂದ ವಿದ್ಯಾರ್ಥಿಗಳು ನಿತ್ಯ ಶಾಲಾ ಕಾಲೇಜುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ದೃಷ್ಟಿಯಿಂದ ವಿದ್ಯಾರ್ಥಿ ವೇತನ ನೀಡುವುದು ಸರ್ಕಾರಗಳ ಕರ್ತವ್ಯ, ಆದರೆ ಕಳೆದ ವರ್ಷದ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ಸರಿಯಾಗಿ ಜಮೆ ಮಾಡಿಲ್ಲ. ಶಾಲಾ ಕಾಲೇಜುಗಳು ಪ್ರಾರಂಭವಾಗಿ ಒಂದು ತಿಂಗಳು ಕಳೆದರು ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ಪ್ರವೇಶಾತಿ ಸಿಗುತ್ತಿಲ್ಲ.
ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಪದೆ ಪದೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಯಿತು.ಈ ವೇಳೆ ನಗರ ಕಾರ್ಯದರ್ಶಿ ಆನಂದ, ನಗರ ಸಹಕಾರ್ಯದರ್ಶಿ ಪವನ ಕುಂಬಾರ, ನಾಗರಾಜ ಸುಲ್ತಾನಪೂರ, ಹೋರಾಟ ಪ್ರಮುಖ ಅಭಿಷೇಕ ಶಂಭು, ಎಬಿವಿಪಿ ತಾಲೂಕು ಸಂಚಾಲಕ ಮಹೇಶ, ಶಶಿಕಾಂತ, ಅಂಬರೀಶ ಬಿರಾದರ್, ಪದ್ಮಾಕರ ಕಾವೇರಿ, ಮಠಪತಿ, ರಾಜ್ಯ ಕಾರ್ಯಕಾರಣಿ ಸದಸ್ಯ ಪ್ರಾರ್ಥನಾ, ಮಮತಾ ಇನ್ನಿತರ ವಿದ್ಯಾರ್ಥಿಗಳು, ಕಾರ್ಯಕರ್ತರು ಇತರರಿದ್ದರು.