ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು
ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ನಿರ್ಮಿಸುವ ಮೂಲಕ ಜನಸಾಮಾನ್ಯರಿಗೂ ಸಂವಿಧಾನದ ಮಹತ್ವವನ್ನು ಸಾರುವುದು ಹಾಗು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. ಪ್ರತಿ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತಾಲೂಕಾಡಳಿತ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಸೋಮವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಮಾನವ ಸರಪಳಿ ನಿರ್ಮಿಸುವ ಸಲುವಾಗಿ ನಡೆದ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಪ್ರಜಾಪ್ರಭುತ್ವದ ನೆಲೆಗಟ್ಟನ್ನು ಉಳಿಸುವ ಜತೆಗೆ ಗಟ್ಟಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾನವ ಸರಪಳಿ ನಿರ್ಮಿಸುವಂತಹ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮತ್ತು ಆಶಾ, ಅಂಗನವಾಡಿ, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರನ್ನು ಕರೆತಂದು ತಾಲೂಕಿನ ಗಡಿಯಿಂದ ಜಿಲ್ಲೆಯ ಗಡಿಯವರೆಗೆ ಮಾನವ ಸರಪಳಿ ನಿರ್ಮಿಸಬೇಕು ಎಂದು ಸೂಚಿಸಿದರು.ಕಾರ್ಯಕ್ರಮ ನಿರ್ವಹಣೆಗೆ ಕಿ.ಮೀ ಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಮಾನವ ಸರಪಳಿ ಯಶಸ್ವಿಗೆ ಸಹಕರಿಸಬೇಕು. ದೇಶಕ್ಕಾಗಿ ಒಂದು ಗಂಟೆ ತಮ್ಮ ಸಮಯವನ್ನು ಪ್ರಜಾಪ್ರಭುತ್ವ ದಿನಾಚರಣೆಗೆ ಮೀಸಲಿಟ್ಟು ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಶಾಸಕ ಎನ್. ವೈ ಗೋಪಾಲಕೃಷ್ಣ ಮಾತನಾಡಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಎಲ್ಲಾ ಜನತೆಗೆ ತಿಳಿಸುವ ಉದ್ದೇಶದಿಂದ ಮಾನವ ಸರಪಳಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಕಾರ್ಯಕ್ರಮದ ಭಾಗವಾಗಿ ಪ್ರತಿ ಇಲಾಖಾಧಿಕಾರಿಗಳು ಸಭೆ ನಡೆಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಭೆ ನಡೆಸಿ ಸ್ಥಳೀಯವಾಗಿ ಸಂಘಟಿಸಬೇಕು ಎಂದು ತಿಳಿಸಿದರು.ಆಯಾ ಶಾಲೆ ಶಿಕ್ಷಕರು, ಶಾಲಾ ಮಕ್ಕಳನ್ನು ಕರೆತರುವುದು ಮತ್ತು ಕಳಿಸಿಕೊಡುವ ಜವಾಬ್ದಾರಿ ಹೊರಬೇಕು. ಅಧಿಕಾರಿಗಳು ಇವತ್ತಿನಿಂದಲೇ ಜಾಗೃತರಾಗಿ ಕೆಲಸ ಮಾಡಬೇಕು. ತಾಲೂಕಿನಲ್ಲಿ ಎಲ್ಲಿಯೂ ಲೋಪ ಬಾರದಂತೆ ಸರ್ಕಾರದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿ, ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ ಏಕ ಕಾಲದಲ್ಲಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನ ಓದಿ ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತು ತಿಳಿಸಬೇಕು. ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳ ತಂಡವನ್ನು ನೇಮಿಸಲಾಗುತ್ತದೆ. ಪಂಚಾಯಿತಿ ವಾರು ಸಭೆಗಳನ್ನು ನಡೆಸಿ ಕಾರ್ಯಕ್ರಮದ ಯಶಸ್ವಿಗೆ ಬದ್ಧರಾಗಬೇಕೆಂದರು.ಈ ವೇಳೆ ಜಿಲ್ಲಾ ಪಂಚಾಯತ್ ನಿರ್ವಹಣಾಧಿಕಾರಿ ಸೋಮಶೇಖರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಮ್ಮಯ್ಯ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಜಗದೀಶ್ ಹೆಬ್ಬಳ್ಳಿ, ತಹಸೀಲ್ದಾರ್ ಜಗದೀಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹನುಮಂತಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.