ಹಾವೇರಿ: ಮಂಡ್ಯ ಜಿಲ್ಲೆಯಲ್ಲಿ ಡಿ.೨೦, ೨೧, ಹಾಗೂ ೨೨ರಂದು ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಜಿಲ್ಲೆಯಲ್ಲಿ ಸೆ.೨೬ ಹಾಗೂ ೨೭ರಂದು ಸಂಚರಿಸಲಿದೆ. ಈ ರಥ ಯಾತ್ರೆ ಅಭೂತಪೂರ್ವ ಸ್ವಾಗತಕ್ಕೆ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಕನ್ನಡ ಜ್ಯೋತಿ ರಥಯಾತ್ರೆ ಸ್ವಾಗತ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಜ್ಯೋತಿ ರಥಯಾತ್ರೆಯನ್ನು ಜಿಲ್ಲೆಯ ಗಡಿಭಾಗದಲ್ಲಿ ಹಾಗೂ ತಾಲೂಕಿನ ಗಡಿ ಭಾಗದಲ್ಲಿ ಪೂರ್ಣಕುಂಭದೊಂದಿಗೆ ಅತ್ಯಂತ ವಿಜೃಂಭಣೆಯಿಂದ ಸ್ವಾಗತಮಾಡಿಕೊಳ್ಳಬೇಕು ಎಂದರು.ಕನ್ನಡ ಜ್ಯೋತಿ ರಥಯಾತ್ರೆ ಸೆ. ೨೬ ರಂದು ಹಾನಗಲ್ ತಾಲೂಕು ಮೂಲಕ ಜಿಲ್ಲೆಗೆ ಆಗಮಿಸಲಿದೆ. ಹಾನಗಲ್ ತಾಲೂಕಿನಿಂದ ಹಿರೇಕೆರೂರು, ರಟ್ಟಿಹಳ್ಳಿ, ರಾಣೇಬೆನ್ನೂರ, ಬ್ಯಾಡಗಿ, ಹಾವೇರಿ, ಶಿಗ್ಗಾಂವ ಹಾಗೂ ಸವಣೂರ ಮಾರ್ಗವಾಗಿ ಸಂಚರಿಸಲಿದೆ. ಅಧಿಕಾರಿಗಳು, ಕನ್ನಡಪರ ಸಂಘನೆಗಳು, ವಿವಿಧ ಸಂಘ-ಸಂಸ್ಥೆಗಳು ಉತ್ಸಾಹದಿಂದ ಭಾಗವಹಿಸುವ ಮೂಲಕ ಯಶಸ್ವಿ ರಥಯಾತ್ರೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರದ ಸಮಯದಲ್ಲಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ತಾಲೂಕು ಮಟ್ಟದಲ್ಲಿ ಆಯಾ ತಾಲೂಕು ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಿಪಿಐ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಪೂರ್ವಭಾವಿ ಸಭೆ ನಡೆಸಿ, ಯಾವುದೇ ಲೋಪವಾಗದಂತೆ ರಥದ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.ಪ್ರತಿ ತಾಲೂಕು ಕೇಂದ್ರದಲ್ಲಿ ರಥ ಯಾತ್ರೆಗೆ ಎರಡು ಗಂಟೆ ಅವಕಾಶವಿದ್ದು, ತಾಲೂಕಿನ ಗಡಿ ಭಾಗದಲ್ಲಿ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಒಂದರಿಂದ ಎರಡು ಜನರು ರಥಯಾತ್ರೆಯನ್ನು ಸ್ವಾಗತಿಸಿಕೊಳ್ಳಬೇಕು. ನಂತರ ನಗರದ ರಾಜಮಾರ್ಗದಲ್ಲಿ ಅದ್ಧೂರಿ ಮೆರವಣಿಗೆ ನಡೆಸಿ ತಾಲೂಕಿನ ಗಡಿಗೆ ಬೀಳ್ಕೊಡಬೇಕು. ಕನ್ನಡ ಜ್ಯೋತಿ ರಥಯಾತ್ರೆ ಮೆರವಣಿಗೆ ಮಾರ್ಗವನ್ನು ತಳಿರುತೋಣಗಳಿಂದ ಶೃಂಗಾರಮಾಡಬೇಕು ಎಂದು ತಿಳಿಸಿದರು.ಹಾವೇರಿಗೆ ಆಗಮಿಸುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ತೋಟದಯಲ್ಲಾಪುರ ಬಳಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ನಗರದ ಹೊಸಮನಿ ಸಿದ್ದಪ್ಪ ವೃತ್ತ ಮಾರ್ಗವಾಗಿ ವಾಲ್ಮೀಕಿ ವೃತ್ತದ ವರೆಗೆ ಮೆರವಣಿಗೆ ನಡೆಯಲಿದ್ದು, ಅಂದಾಜು ಐದರಿಂದ ಆರು ಸಾವಿರ ಜನರು ಭಾಗವಹಿಸುವಂತೆ ನೋಡಿಕೊಳ್ಳಬೇಕು. ವಿವಿಧ ಇಲಾಖೆ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ವಿವಿಧ ಕನ್ನಡಪರ ಸಂಘನೆಗಳ ಪದಾಧಿಕಾರಿಗಳು, ರೋಟರಿ, ಲಯನ್ಸ್ ಕಬ್ಲ್, ಎನ್.ಸಿ.ಸಿ., ಎನ್.ಎಸ್.ಎಸ್. ಕಾಲೇಜು ವಿದ್ಯಾರ್ಥಿಗಳು ಉಪನ್ಯಾಸಕರು ಭಾಗವಹಿಸಲು ತಿಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಯಾವುದೇ ಲೋಪವಾಗದಂತೆ ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ ಅವರು ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರದ ಮಾಹಿತಿ ನೀಡಿದರು.ಸಭೆಯಲ್ಲಿ ಉಪ ವಿಭಾಗಾಧಿಕಾರಿಗಳಾದ ಚನ್ನಪ್ಪ, ಮಹ್ಮದ ಖಿಜರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಕನ್ನಡ ಸಾಹಿತ್ಯ ಪರಿಷತ್ ವಿವಿಧ ತಾಲೂಕಾ ಅಧ್ಯಕ್ಷರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ತಾಲೂಕಾ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.