ಕನ್ನಡಪ್ರಭ ವಾರ್ತೆ ಬೆಳಗಾವಿ
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಗುರುತಿಸಲಾಗುವ ಮಾಧ್ಯಮರಂಗವು ಆಡಳಿತ ವ್ಯವಸ್ಥೆ ಸುಧಾರಣೆಗೆ ಅನುಕೂಲ ಕಲ್ಪಿಸುವುದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ನಗರದ ಎಸ್‌ಜಿಬಿಐಟಿ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಅವರು ಮಾತನಾಡಿದರು. ಭಾಷಾ ಸೂಕ್ಷ್ಮತೆ ಇರುವುದರಿಂದ ಜಿಲ್ಲೆಯಲ್ಲಿ ನಡೆಯುವ ವರದಿಗಳು ದೆಹಲಿಯಲ್ಲಿ ಕೂಡ ಸದ್ದು ಮಾಡುತ್ತವೆ. ಆದ್ದರಿಂದ ಕೆಲವೊಮ್ಮೆ ವೈಯಕ್ತಿಕ ಘರ್ಷಣೆಗಳು ಕೂಡ ಜಾತಿ-ಧರ್ಮ, ಭಾಷಾ ವೈಷಮ್ಯದ ಸ್ವರೂಪ ಪಡೆದುಕೊಂಡು ಜಿಲ್ಲೆಗೆ ಕೆಟ್ಟ ಹೆಸರು ತರುತ್ತವೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಆದ್ದರಿಂದ ಜಾತಿ-ಧರ್ಮ, ಭಾಷೆಯ ವಿಚಾರಕ್ಕೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ವರದಿ ಮಾಡುವಾಗ ಮಾಧ್ಯಮ ಪ್ರತಿನಿಧಿಗಳು ಸಮಗ್ರ ಸಂಗತಿಯನ್ನು ಪರಾಮರ್ಶೆ ಮಾಡಿಕೊಂಡು ನೈಜ ಸಂಗತಿಯನ್ನು ವರದಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಪತ್ರಕರ್ತರಿಗೆ ನಿವೇಶನ ಹಾಗೂ ಆರೋಗ್ಯ ವಿಮೆ ಸೇರಿದಂತೆ ಪತ್ರಕರ್ತರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಪತ್ರಕರ್ತರಿಗೆ ನಿವೇಶನ ಮಂಜೂರಾತಿಗೆ ಜಿಲ್ಲಾಧಿಕಾರಿ, ನಗರಾಭಿವೃದ್ಧಿ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದರು. ಸುದ್ದಿಗಳ ಸತ್ಯಾಸತ್ಯತೆ ಪರಿಶೀಲಿಸಿ, ವರದಿಗಳನ್ನು ಮಾಡಬೇಕು. ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಸರ್ಕಾರವನ್ನು ಎಚ್ಚರಿಸುವಂತಹ ಕೆಲಸಗಳನ್ನು ಮಾಡಬೇಕು. ಸಮಾಜ ತಿದ್ದುವ ಮತ್ತು ಜನರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ದೂತರಾಗಿ ಮಾಧ್ಯಮ ಕಾರ್ಯನಿರ್ವಹಿಸುತ್ತಿದೆ. ಪತ್ರಕರ್ತರು ಸಂಘಟಿತರಾಗಿ ಅವರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ. ಜಿಲ್ಲೆಯಲ್ಲಿ ಈಗಾಗಲೇ ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಲಾಗಿದೆ. ಬರುವ ದಿನಗಳಲ್ಲಿ ನೂತನ ಕಟ್ಟನ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಒದಗಿಸಲಾಗುವುದು ಎಂದು ಜಾರಕಿಹೊಳಿ ತಿಳಿಸಿದರು.ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಪ್ರಜಾತಂತ್ರದ ವ್ಯವಸ್ಥೆಯಲ್ಲಿ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ, ಮಾಧ್ಯಮ ಮೂಲಕ ಪ್ರಜಾತಂತ್ರ ಯಶಸ್ವಿಯಾಗಿ ನಡೆಯುತ್ತದೆ. ಸಮಾಜದಲ್ಲಿ ಜಾಗೃತಿ, ಜನರಲ್ಲಿ ತಿಳುವಳಿಕೆ ಮೂಡಿಸುವ ಕಾರ್ಯ ಮಾಧ್ಯಮ ನಿರ್ವಹಿಸುತ್ತದೆ. ಸಮಾಜದ ಬದಲಾವಣೆಯಲ್ಲಿ ಎಲೆಕ್ಟ್ರಾನಿಕ್ ಮತ್ತು ಮುದ್ರಣ ಮಾಧ್ಯಮ ಬಹಳ ಮಹತ್ವದ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಶಾಸಕರಾದ ಆಸೀಫ್ ಸೇಠ, ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ, ಶ್ರೀಕಾಂತ ಕುಬಕಡ್ಡಿ, ಸಹದೇವ ಮಾನೆ ಮಾತನಾಡಿದರು.ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಸಂಘದ ಅಧ್ಯಕ್ಷ ಮಂಜುನಾಥ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ಪಾಲಿಕೆ ಆಯುಕ್ತೆ ಶುಭ ಬಿ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ, ವಾರ್ತಾ ಮತ್ತು ಸಾರ್ವನಿಜಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ, ಬೆಳಗಾವಿ ಪತ್ರಕರ್ತರ ಸಂಘದ ಅಧ್ಯಕ್ಷ ವಿಲಾಸ ಜೋಶಿ, ಬೆಳಗಾವಿ ಮರಾಠಿ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣಾ ಶಹಾಪುರಕರ, ಮತ್ತಿತರರು ಉಪಸ್ಥಿತರಿದ್ದರು.ಚಂದ್ರಕಾಂತ ಸುಗಂಧಿ ಸ್ವಾಗತ ಕೋರಿದರು, ಸುನೀತಾ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು.