ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಸರ್ಕಾರಿ ನೌಕರರ ಸೇವಾ ವಿಕಾಸ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಅಧಿಕಾರಿ ಹಾಗೂ ನೌಕರರ ಸಂಘ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ನುಡಿಹಬ್ಬ ಹಾಗೂ ಕ್ರೀಡೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡದ ಬಳಕೆ ಹೆಚ್ಚಾಗಬೇಕು. ಭಾಷಾಭಿಮಾನ ನಮ್ಮ ನಡೆ-ನುಡಿ ಮತ್ತು ಆಚರಣೆಗಳಲ್ಲಿ ಪ್ರತಿಫಲಿಸಬೇಕು. ಕನ್ನಡದ ಜೊತೆಗೆ ಇತರ ಭಾಷೆಗಳನ್ನೂ ಗೌರವಿಸುವ ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ನಾಡಿನ ಅನೇಕ ಹಿರಿಯ ಕವಿ, ಸಾಹಿತಿ ಹಾಗೂ ಕಲಾವಿದರು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಸಾಧನೆಗಳು ಇಂದಿನ ಪೀಳಿಗೆಗೆ ಸ್ಫೂರ್ತಿಯ ಸೆಲೆಯಾಗಿವೆ. ಪ್ರತಿಯೊಬ್ಬರೂ ಕನ್ನಡ ಪತ್ರಿಕೆಗಳು ಹಾಗೂ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪರಭಾಷಿಕರಿಗೆ ಕನ್ನಡ ಕಲಿಸುವ ಮೂಲಕ ಭಾಷೆಯ ಬೆಳವಣಿಗೆಗೆ ಕೈಜೋಡಿಸಬೇಕು. ಕನ್ನಡ ಭಾಷೆಯ ಉಳಿವು, ಬೆಳವಣಿಗೆ ಮತ್ತು ವಿಕಾಸದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದರು.ಭಾಷೆ ಮತ್ತು ಸಂಸ್ಕೃತಿಯನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ ಕಚೇರಿಯ ದೈನಂದಿನ ಕಾರ್ಯಚಟುವಟಿಕೆಗಳಲ್ಲಿಯೂ ಎತ್ತಿಹಿಡಿಯಬೇಕು. ಇಲಾಖೆಯ ಜವಾಬ್ದಾರಿಗಳನ್ನು ದಕ್ಷತೆ, ಪ್ರಾಮಾಣಿಕತೆ ಹಾಗೂ ವೃತ್ತಿಪರತೆಯಿಂದ ನಿರ್ವಹಿಸಬೇಕು. ಇಲಾಖೆಯಿಂದ ಹೊರಬರುವ ವರದಿಗಳ ಗುಣಮಟ್ಟವನ್ನು ಹೆಚ್ಚಿಸಲು ಅಧಿಕಾರಿಗಳು ಮತ್ತು ನೌಕರರು ವಿಶೇಷ ಗಮನಹರಿಸಬೇಕು ಎಂದು ತಿಳಿಸಿದರು.
ನೌಕರರ ಸಂಘಟನೆಯ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸಲು ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ಸಂಘಟನೆಯ ಕಚೇರಿ ಸ್ಥಾಪನೆಗಾಗಿ ನಿವೇಶನ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ ಮನವಿಯನ್ನು ಪರಿಶೀಲಿಸಿ ನಿವೇಶನ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಹೇಳಿದರು.
ಇದೇ ಕಾರ್ಯಕ್ರಮದಲ್ಲಿ ನೌಕರರ ಪ್ರತಿಭಾವಂತರಾದ 22ಕ್ಕೂ ಹೆಚ್ಚಿನ ಮಕ್ಕಳನ್ನು ಗುರುತಿಸಿ, ಪ್ರಮಾಣಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿವಿಧ ಜಿಲ್ಲೆಗಳ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಅಧಿಕಾರಿ ಹಾಗೂ ನೌಕರರ ಸಂಘದ ನೌಕರರು ಮತ್ತು ಅವರ ಕುಟುಂಬದ ಅವಲಂಬಿತರು ಉಪಸ್ಥಿತರಿದ್ದರು.