ಕನ್ನಡಪ್ರಭ ವಾರ್ತೆ ಹೊಸಪೇಟೆ
ಇತ್ತೀಚಿನ ದಿನಗಳಲ್ಲಿ ಎಚ್‌ಐವಿ ಸೋಂಕು ಯುವಜನರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಜಿಲ್ಲೆಯ ಕೂಡ್ಲಿಗಿ ಮತ್ತು ಹೊಸಪೇಟೆ ತಾಲೂಕುಗಳಲ್ಲಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.ನಗರದ ಜೈ ಭೀಮ್ ವೃತ್ತದಲ್ಲಿ ಏಡ್ಸ್ ತಡೆ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮೊಂಬತ್ತಿ ಮೆರವಣಿಗೆ ಚಾಲನೆ ನೀಡಿ ಮಾತನಾಡಿದರು.
ಏಡ್ಸ್‌ಗೆ ಯುವಕರು ಅದರಲ್ಲೂ ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ನಿಜಕ್ಕೂ ಆತಂಕದ ಸಂಗತಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಜಿಲ್ಲೆಯ ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಏಡ್ಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಕಳವಳಕಾರಿ ಸಂಗತಿ ಆಗಿದೆ. ಸೋಂಕಿತರೊಂದಿಗೆ ಲೈಂಗಿಕ ಸಂಪರ್ಕದಿಂದ ದೂರವಿರಬೇಕು. ಸುರಕ್ಷಿತ ಲೈಂಗಿಕ ಕ್ರಮಕ್ಕೆ ಮುಂದಾಗಿ, ಮನೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಆರೋಗ್ಯದ ಬಗ್ಗೆ ಅವಶ್ಯ ಜ್ಞಾನ ನೀಡಬೇಕು. ಪ್ರತಿಯೊಬ್ಬರೂ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಿ, ಏಡ್ಸ್ ತಡೆಗಟ್ಟುವಲ್ಲಿ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.ರೋಟರಿ ಕ್ಲಬ್ ಅಧ್ಯಕ್ಷ ಸತ್ಯನಾರಾಯಣ ಮಾತನಾಡಿ, ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ರೋಟರಿ ಸಂಸ್ಥೆ ಏಡ್ಸ್ ರೋಗಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದೆ. ಅವರಿಗೆ ಪ್ರತಿ ತಿಂಗಳ ಎರಡನೇ ಶನಿವಾರ ಏಡ್ಸ್ ಆರೋಗ್ಯ ತಪಾಸಣೆ ಆಪ್ತ ಸಮಾಲೋಚನೆ ನಡೆಸುವ ಜತೆಗೆ ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದೆ ಎಂದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ವಿವಿಧ ಬೀದಿಗಳಲ್ಲಿ ಸಂಚರಿಸಿ, ಜಾಗೃತಿ ಮೂಡಿಸಿತು.ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಂಕರ್ ನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ. ಭಾಸ್ಕರ್, ಆರ್‌ಸಿಎಚ್‌ಒ ಡಾ. ಜಂಬಯ್ಯ, ಡಾ. ಜಗದೀಶ್ ಪಾಟ್ನೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಡಾ. ಬಸವರಾಜ, ಧರ್ಮನಗೌಡ, ರೆಡ್‌ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಅನ್ನಪೂರ್ಣ ಸದಾಶಿವ, ರಾಜ್ಯ ವ್ಯವಸ್ಥಾಪಕ ಸಮಿತಿ ಸದಸ್ಯೆ ರೇಖಾ ಪ್ರಕಾಶ್, ರೋಟರಿ ಕಾರ್ಯದರ್ಶಿ ದಾದಾಪೀರ್, ಇನ್ನರ್‌ವ್ಹೀಲ್ ಅಧ್ಯಕ್ಷೆ ರಮ್ಯಾ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.