ಕನ್ನಡಪ್ರಭ ವಾರ್ತೆ ಹುಮನಾಬಾದ್
ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ನಡೆದ ರಾಜೋತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣದ ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಅವರು, ರಾಜ್ಯದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಇಲ್ಲ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.
ಕ್ಷೇತ್ರದ ಅಭಿವೃದ್ಧಿಗಾಗಿ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್ ಅವರು ಅನುದಾನ ತಂದಿರು ವುದನ್ನು ಸಾಬೀತುಪಡಿಸಿದರೆ, ರಾಜೀನಾಮೆ ನೀಡಲೂ ಸಿದ್ಧನಿದ್ದೇನೆ. ಆದರೆ, ಅಭಿವೃದ್ಧಿ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಎಸ್‌ಎಸ್‌ಪಿಡಿ ಯೋಜನೆಯಡಿ ದುಬಲಗುಂಡಿ ಹಾಗೂ ಚಿಟಗುಪ್ಪ ಪಟ್ಟಣಗಳ ಅಭಿವೃದ್ಧಿಗಾಗಿ ಅನುದಾನ ಮಂಜೂರು ಮಾಡುವಂತೆ ಬೇಡಿಕೆ ಸಲ್ಲಿಸಿ ಆರು ತಿಂಗಳು ಕಳೆದಿದ್ದರೂ, ಈವರೆಗೆ ಒಂದು ನಯಾಪೈಸೆಯೂ ಬಿಡುಗಡೆಯಾಗಿಲ್ಲ ಆದರೆ ಅನುದಾನ ಬಿಡುಗಡೆಯಾಗಿದೆ ಎಂಬಂತೆ ತಪ್ಪು ಮಾಹಿತಿ ನೀಡುವ ಮೂಲಕ ಜನರಲ್ಲಿ ಗೊಂದಲ ಮೂಡಿಸಲಾಗುತ್ತಿದೆ ಎಂದರು.
ತಹಸೀಲ್ದಾರ ಜಗದೀಶ ಚೌರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಚಿದಾನಂದ ಚಿಕಮಠ ವಿಶೇಷ ಉಪನ್ಯಾಸ ಮಂಡಿಸಿದರು. ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು. ಭುವನೇಶ್ವರಿ ನಿರೋಪಿಸಿದರು.