ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎನ್ಯುಮರೇಷನ್ ಫಾರ್ಮ್ ಪಡೆದಿರುವ 73 ಮತದಾರರ ಹೆಸರುಗಳನ್ನು ಫಾರ್ಮ್ ನಂ.7ರ ಮೂಲಕ ಕೈಬಿಡಲು ಮುಂದಾಗಿರುವ ಕುರಿತು ದೂರು ನೀಡಲಾಗಿದೆ. ಮತದಾರರ ಪಟ್ಟಿಯಿಂದ ಯಾರ ಹೆಸರನ್ನೂ ಅನ್ಯಾಯವಾಗಿ ಕೈಬಿಡಬಾರದು. ಈ ಪ್ರಕರಣದಲ್ಲಿ ಹೆಸರುಗಳನ್ನು ಕೈಬಿಡಲು ಕಾರಣವೇನು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಅಧಿಕಾರಿಗಳಿಂದಾಗಲೀ ಅಥವಾ ಯಾವುದೇ ರಾಜಕೀಯ ಪಕ್ಷದವರಿಂದಾಗಲೀ ತಪ್ಪಾಗಿದ್ದರೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಅರ್ಹ ಮತದಾರರ ಮತದಾನದ ಹಕ್ಕು ಕಸಿಯುವ ಪ್ರಯತ್ನಕ್ಕೆ ಅವಕಾಶ ನೀಡಬಾರದು ಎಂದರು.ಶಿವಮೊಗ್ಗ ನಗರದಲ್ಲಿ ಸುಮಾರು 52 ಸಾವಿರ ಮತದಾರರ ಹೆಸರುಗಳು ಪರಿಷ್ಕರಣೆ ಸಂದರ್ಭದಲ್ಲಿ ಕೈಬಿಡಲಾಗಿದೆ ಎಂಬ ವಿಚಾರದ ಬಗ್ಗೆಯೂ ಕಾಂಗ್ರೆಸ್ ಪರಿಶೀಲನೆ ನಡೆಸುತ್ತಿದೆ. ಮೃತರು, ಸ್ಥಳಾಂತರಗೊಂಡವರು ಸೇರಿದಂತೆ ವಿವಿಧ ಕಾರಣಗಳಿಂದ ಹೆಸರುಗಳು ಬದಲಾಗಿರಬಹುದು. ಆದರೆ ಅರ್ಹ ಮತದಾರರ ಹೆಸರುಗಳು ತಪ್ಪಾಗಿ ಕೈಬಿಡಲ್ಪಟ್ಟಿದ್ದರೆ ಅವುಗಳನ್ನು ಸರಿಪಡಿಸಬೇಕು ಎಂದು ಹೇಳಿದರು.
ಮನೆ-ಮನೆಗೆ ತೆರಳಿ ಪರಿಶೀಲನೆ: ಎಸ್‌ಐಆರ್ ಪ್ರಕ್ರಿಯೆಗಾಗಿ ಕಾಂಗ್ರೆಸ್ ಪಕ್ಷದಿಂದ ಬೂತ್ ಮಟ್ಟದಲ್ಲಿ ಬಿಎಲ್‌ಎ-೨ ಸೇರಿದಂತೆ ವಿವಿಧ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ವಾರ್ಡ್ ಹಾಗೂ ಘಟಕ ಮಟ್ಟದಲ್ಲಿ ಸಭೆ ನಡೆಸಿ, ಮನೆ-ಮನೆಗೆ ತೆರಳಿ ಮತದಾರರ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಯಾವುದೇ ಜಾತಿ, ಧರ್ಮದ ಆಧಾರದ ಮೇಲೆ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆಯಬಾರದು. ಮತದಾನದ ಹಕ್ಕಿನ ರಕ್ಷಣೆಗೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.
ಮತದಾರರ ಹಕ್ಕು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಹೋರಾಟ ನಡೆಸಲಿದೆ. ಶಿವಮೊಗ್ಗದಲ್ಲೂ ಕೆಪಿಸಿಸಿ ಸೂಚನೆಯಂತೆ ಪ್ರತಿಭಟನೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು ಎಂದರು.
ಸುಂದರೇಶ್ ಅವರನ್ನು ಮತ್ತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ಕೆಪಿಸಿಸಿ ಕೈಗೊಂಡರೂ ತಾವು ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ. ಹುದ್ದೆಯ ಬದಲಾವಣೆ ಪಕ್ಷದ ನಿರ್ಧಾರದಂತೆ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದರು.