ಮಕ್ಕಳ ರಕ್ಷಣೆಯಲ್ಲಿ ಸುರಕ್ಷತೆ, ಸೂಕ್ಷ್ಮತೆ ಇರಲಿ: ಶಶಿಧರ್ ಕೋಸಂಬೆ

KannadaprabhaNewsNetwork | Published : Jan 30, 2024 2:02 AM

ಸಾರಾಂಶ

ಶೋಷಣೆ, ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸುರಕ್ಷತೆ ಮತ್ತು ಸೂಕ್ಷ್ಮತೆಯಿಂದ ನಿಗದಿತ ಕಾಲದಲ್ಲಿ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಮಾಡುವ ಸೇವೆ ದೇವರಿಗೆ ಮಾಡಿದ ಸೇವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಹೇಳಿದರು

ಕನ್ನಡಪ್ರಭ ವಾರ್ತೆ ಯಾದಗಿರಿ

ಮುಗ್ಧ ಮಕ್ಕಳ ಮೇಲಾಗುತ್ತಿರುವ ಶೋಷಣೆ, ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸುರಕ್ಷತೆ ಮತ್ತು ಸೂಕ್ಷ್ಮತೆಯಿಂದ ನಿಗದಿತ ಕಾಲದಲ್ಲಿ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಮಾಡುವ ಸೇವೆ ದೇವರಿಗೆ ಮಾಡಿದ ಸೇವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಮಕ್ಕಳ ನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ 2015, ಬಾಲ್ಯ ವಿವಾಹ ನಿಷೇಧ ಕಾಯ್ದೆ- 2006, ಆರ್.ಟಿ.ಇ ಕಾಯ್ದೆ- 2009, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ - 2012 ಹಾಗೂ ಮಕ್ಕಳ ರಕ್ಷಣಾ ನೀತಿ - 2016ರ ಕುರಿತು ಎರಡು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಹಭಾಗಿದಾರ ಇಲಾಖೆಯ ತಳಮಟ್ಟದ ಮತ್ತು ಎಲ್ಲಾ ಸ್ತರದ ಅಧಿಕಾರಿಗಳು ಮಕ್ಕಳಿಗಾಗಿ ಜಾರಿಯಲ್ಲಿರುವ ಎಲ್ಲಾ ಕಾನೂನು ಮತ್ತು ನಿಯಮಗಳ ಪ್ರಕಾರ ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಕೆಲವು ದಿನಗಳ ಹಿಂದೆ ವಸತಿ ನಿಲಯ, ಶಾಲೆಗಳಿಗೆ ಭೇಟಿ ನೀಡಿದಾಗ ಕಂಡು ಬಂದ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಲೋಪ-ದೋಷಗಳು ಕಂಡುಬಂದರೆ ಅಧಿಕಾರಿಗಳು ಸುಧಾರಿಸಿಕೊಳ್ಳಲು ಗಮನಹರಿಸಬೇಕಾಗಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಹೊನೊಲೆ ಮಾತನಾಡಿ, ಜಿಲ್ಲೆಯ ಅಧಿಕಾರಿಗಳು ಸಂವೇದನೆಯಿಂದ ಕಾರ್ಯನಿರ್ವಹಿಸಿ ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ ಮುಂತಾದ ಸೂಕ್ಷ್ಮ ವಿಷಯಗಳನ್ನು ಮನದಟ್ಟು ಮಾಡಿಕೊಂಡು ತುರ್ತು ಕ್ರಮವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಕಾನೂನಿನ ಕ್ರಮ ಎದುರಿಸಬೇಕಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಡಾ. ಸುಶೀಲಾ ಮಾತನಾಡಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ ಹಾಗೂ ವಿವಿಧ ಭಾಗಿದಾರರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತರಬೇತಿಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಮಕ್ಕಳಿಗಾಗಿ ಇರುವ ಕಾಯ್ದೆಗಳ ಬಗ್ಗೆ ತಿಳಿದುಕೊಂಡು, ತಮ್ಮ ದೈನಂದಿನ ಕಾರ್ಯ ವಿಧಾನಗಳಲ್ಲಿ ಅಳವಡಿಸಿಕೊಂಡು ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪನ್ವಾರ ಮಾತನಾಡಿ, ಎರಡು ದಿನಗಳ ತರಬೇತಿಯಲ್ಲಿ ಭಾಗವಹಿಸಿದ ಗ್ರಾಮೀಣ ಭಾಗದ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣಾ ವಿಷಯ ತಿಳಿದುಕೊಂಡು ತಮ್ಮ ವ್ಯಾಪ್ತಿ ಜನಪ್ರತಿನಿಧಿಗಳಿಗೆ ಮತ್ತು ಗಣ್ಯವ್ಯಕ್ತಿಗಳಿಗೆ ಮಕ್ಕಳ ಹಕ್ಕುಗಳ ಕುರಿತು ಮನವರಿಕೆ ಮಾಡಿ ಮಕ್ಕಳ ಹಕ್ಕುಗಳ ನಿಯಂತ್ರಣ ಮಾಡಲು ಮುಂದಾಗಬೇಕು ಎಂದರು.

ಮಕ್ಕಳ ಸಹಾಯವಾಣಿ ರಾಯಚೂರು ಜಿಲ್ಲಾ ಸಂಯೋಜಕರಾದ ಸುದರ್ಶನ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ, ಮಹಿಳಾ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಪ್ರೇಮಮೂರ್ತಿ, ಮಕ್ಕಳ ರಕ್ಷಣಾ ಅಧಿಕಾರಿ ದಶರಥನಾಯಕ ಸೇರಿ ವಿವಿಧ ಇಲಾಖೆ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Share this article