ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಅ.೧೭ ರಂದು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಜಯಂತ್ಯುತ್ಸವ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯುವಂತಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಜಯಂತ್ಯುತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿ ಹಿನ್ನೆಲೆಯಲ್ಲಿ ಸರ್ಕಾರದ ಆದೇಶಗಳ ಪ್ರಕಾರ ಶಿಷ್ಟಾಚಾರ ಪಾಲಿಸಿ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ವಿತರಣೆ ಮಾಡಬೇಕು. ನಗರದ ಮಹರ್ಷಿ ವಾಲ್ಮೀಕಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಶ್ರೀವೀರ ಮದಕರಿ ನಾಯಕ ವೃತ್ತ ಸೇರಿದಂತೆ ವಿವಿಧ ಕಡೆಗಳಲ್ಲಿ ದೀಪಾಲಂಕಾರ ಮಾಡಬೇಕು. ಸರ್ಕಲ್‌ಗಳ ಸುತ್ತಲು ಸ್ವಚ್ಛತೆ ಕಾಪಾಡಲು, ಕಾರ್ಯಕ್ರಮದ ಆವರಣದಲ್ಲಿ ಶುಚಿತ್ವ ಕಾರ್ಯ ನಡೆಸಲು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.ಜಯಂತಿ ನಿಮಿತ್ತ ಸರ್ಕಾರಿ ಅರೇ ಸರ್ಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳು ಹಾಗು ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ವೇದಿಕೆಯ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿಯವರ ಜೀವನ ಚರಿತ್ರೆಯ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಾಡು ಮಾಡಬೇಕು. ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ಸಮಾಜದ ಮುಖಂಡರಾದ ಗುಜ್ಜಲ್ ಶ್ರೀನಾಥ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಸಹ ಸಮಾರಂಭದಲ್ಲಿ ವಿಜಯನಗರ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡ ಸಮುದಾಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಬೇಕು. ಅದೇ ರೀತಿ ವಿಶೇಷ ಸಾಧನೆ ತೋರಿದ ಪರಿಶಿಷ್ಟ ಪಂಗಡ ಸಮುದಾಯದ ವಿದ್ಯಾರ್ಥಿ-ಯುವಜನರು ಮತ್ತು ಗಣ್ಯರಿಗೆ ಸಹ ಸನ್ಮಾನಿಸಿ ಗೌರವಿಸಬೇಕು ಎಂದು ಸಭೆಗೆ ಸಲಹೆ ಮಾಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಾಶುಮೋದ್ದೀನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಎಚ್.ಎಸ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಮಚಂದ್ರಪ್ಪ ಕೆ.ಬಿ., ಸಮಾಜದ ಮುಖಂಡ ಗುಜ್ಜಲ ಗಣೇಶ, ಗೋಸಲ ಭರಮಪ್ಪ, ಜೆ.ವಸಂತಕುಮಾರ, ಚಂದ್ರಶೇಖರ, ಪಿ.ವೆಂಕಟೇಶ, ಗುಜ್ಜಲ ಚಂದ್ರಶೇಖರ, ನಿಶಾನಿ ಕನಿಮಪ್ಪ, ಸೋಮಪ್ಪ, ಶ್ರೀಕಂಠ, ಕಟಗಿ ಜಂಬಯ್ಯ, ಗುಡಗುಂಟಿ ಮಲ್ಲಿಕಾರ್ಜುನ, ಜಗದೀಶ ಕಮತಗಿ ಸೇರಿದಂತೆ ಇನ್ನೀತರ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.