ಹಂಪಿ ಉತ್ಸವ ನಾಡಹಬ್ಬದಂತೆ ವಿಜೃಂಭಣೆಯಿಂದ ಆಚರಿಸೋಣ: ಜಮೀರ್ ಅಹಮದ್‌ ಖಾನ್

KannadaprabhaNewsNetwork |  
Published : Jan 16, 2026, 01:00 AM IST
ಹಂಪಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್‌ ಖಾನ್ ಉತ್ಸವದ ಲೋಗೋ ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ಹಂಪಿ ಉತ್ಸವ ಫೆ. 13, 14 ಹಾಗೂ 15ರಂದು ನಡೆಯಲಿದೆ. ಫೆ. 13ರಂದು ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಈ ಕುರಿತು ಹೊಸಪೇಟೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಹೊಸಪೇಟೆ: ವಿಶ್ವ ಪ್ರಸಿದ್ಧ ವಿಶ್ವ ಪಾರಂಪರಿಕ ತಾಣ ಹಂಪಿ ಉತ್ಸವವು ನಾಡಹಬ್ಬವಿದ್ದಂತೆ, ಎಲ್ಲರೂ ಸೇರಿ ವಿಜೃಂಭಣೆಯಿಂದ ಹಾಗೂ ವಿನೂತನವಾಗಿ ಆಚರಿಸಲು ಎಲ್ಲ ಸಿದ್ಧತೆ ಕೈಗೊಳ್ಳಬೇಕು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್‌ ಖಾನ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಂಪಿ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಂಪಿ ಉತ್ಸವ ಫೆ. 13, 14 ಹಾಗೂ 15ರಂದು ನಡೆಯಲಿದೆ. ಫೆ. 13ರಂದು ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಆದ್ದರಿಂದ ಅಧಿಕಾರಿಗಳು ಕಳೆದ ಬಾರಿಗಿಂತಲೂ ಈ ವರ್ಷ ಅಚ್ಚುಕಟ್ಟಾಗಿ ಆಯೋಜನೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಕಳೆದ ಬಾರಿ ಉಂಟಾದ ಲೋಪ-ದೋಷ, ಇನ್ನಿತರ ಸಮಸ್ಯೆಗಳು ಮರುಕಳಿಸದಂತೆ ಅಗತ್ಯ ಕ್ರಮ ವಹಿಸಬೇಕು ಎಂದರು.

ಶಿಷ್ಟಾಚಾರ ಪಾಲಿಸೋಣ: ಶಿಷ್ಟಾಚಾರದಂತೆ ವೇದಿಕೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಆರೋಗ್ಯ ಇಲಾಖೆಯಿಂದ ವೈದ್ಯಕೀಯ ತಪಾಸಣಾ ಶಿಬಿರ ಆಯೋಜನೆ ಮಾಡುವಂತೆ ನಿರ್ದೇಶಿಸಿದರು. ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಜಿಲ್ಲೆಯ ವಿವಿಧ ತಾಲೂಕು ಹಾಗೂ ಗ್ರಾಮೀಣ ಭಾಗದಿಂದ ಬರುವಂತಹ ಸಾರ್ವಜನಿಕರಿಗೆ ಕೆಎಸ್‌ಆರ್‌ಟಿಸಿ ವತಿಯಿಂದ ಸಾರಿಗೆ ವ್ಯವಸ್ಥೆ, ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು.

ಉತ್ಸವದ ಅಂಗವಾಗಿ ಕಲೆ, ಚಿತ್ರಕಲೆ, ವಾಸ್ತುಶಿಲ್ಪ, ಫಲಪುಷ್ಪ ಪ್ರದರ್ಶನ, ಸಾಹಸ ಕ್ರೀಡೆ, ಸುಗಮ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ಸ್ಥಳೀಯ ಕಲಾವಿದರಿಂದ ವಿಜಯನಗರ ಸಾಮ್ರಾಜ್ಯದ ಆಡಳಿತ ಗತವೈಭವ ಕುರಿತ ಧ್ವನಿ ಬೆಳಕು ಪ್ರದರ್ಶನ ಮಾಡಲಾಗುತ್ತದೆ. ಅದರಂತೆ ಖ್ಯಾತ ಕಲಾವಿದರು ಹಂಪಿ ಉತ್ಸವದಲ್ಲಿ ಭಾಗವಹಿಸಿ ನಾಡಹಬ್ಬ ಹಂಪಿ ಉತ್ಸವಕ್ಕೆ ಮತ್ತಷ್ಟು ಮೆರುಗು ತುಂಬಲಿದ್ದಾರೆ ಎಂದು ತಿಳಿಸಿದರು.

ವಿಶೇಷ ಡ್ರೋನ್ ಶೋ, ಗಾಳಿಪಟ ಉತ್ಸವ: ಈ ಬಾರಿ ಉತ್ಸವದಲ್ಲಿ ವಿಶೇಷವಾಗಿ ಮುಂಬಯಿ ತಾಂತ್ರಿಕ ಕಲಾಬಳಗ ಮೂರು ಸಾವಿರ ಡ್ರೋನ್ ಬಳಸಿ ಡ್ರೋನ್ ಶೋ ನಡೆಸಲಿದೆ. ಅದರಂತೆ ಗಾಳಿಪಟ ಉತ್ಸವ ಕೂಡ ಆಯೋಜಿಸಲಾಗಿದೆ. ಈ ವರ್ಷದಲ್ಲಿನ ಹಂಪಿ ಉತ್ಸವದಲ್ಲಿ ಹೆಚ್ಚು ಆಕರ್ಷಣೀಯವಾಗಿದ್ದು, ಮತ್ತಷ್ಟು ರಂಗೇರಿಸಲಿದೆ ಎಂದರು.

ಇದೇ ಸಂದರ್ಭದಲ್ಲಿ ಹಂಪಿ ಉತ್ಸವ ಲೋಗೋ ಬಿಡುಗಡೆಗೊಳಿಸಿದರು. ಸಭೆಯಲ್ಲಿ ಹುಡಾ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ಅಲಿ ಅಕ್ರಂ ಷಾ, ಎಸ್ಪಿ ಎಸ್. ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ