ಕನ್ನಡಪ್ರಭ ವಾರ್ತೆ ಹೊಸಪೇಟೆ
ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಅವರು ಸಸಿ ನೆಟ್ಟರು. ಬಳಿಕ ಮಾತನಾಡಿದ ಅವರು, ಕೈಗಾರೀಕರಣ ಮತ್ತು ಇನ್ನೀತರ ಕಾರಣಗಳಿಂದ ದಿನೇ ದಿನೆ ಪರಿಸರ ತನ್ನ ಸಮತೋಲನವನ್ನು ಕಳೆದುಕೊಳ್ಳುತ್ತಿದೆ. ಈ ಬಗ್ಗೆ ಪ್ರತಿಯೊಬ್ಬರು ಗಂಭೀರವಾಗಿ ಯೋಚಿಸಿ ಗಿಡ, ಮರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಸುವ ಕಾರ್ಯದಲ್ಲಿ ಕೈಜೋಡಿಸಬೇಕು. ಭೂಮಿ, ನೀರು, ಗಾಳಿ ಸರಿಯಾಗಿ ಇದ್ದಾಗ ಮಾತ್ರ ನಾವು ಆರೋಗ್ಯದಿಂದ ಬದುಕಲು ಸಾಧ್ಯವಾಗುತ್ತದೆ ಎಂದರು.
ಪ್ಲಾಸ್ಟಿಕ್ ಬಳಕೆಯನ್ನು ಈಗಾಗಲೇ ನಿಷೇಧಿಸಲಾಗಿದೆ. ಆದಾಗ್ಯೂ ಪ್ಲಾಸ್ಟಿಕ್ ಬಳಸುವುದು ಕಾನೂನಿನ ಉಲ್ಲಂಘನೆಯಾಗುತ್ತದೆ. ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಹೆಚ್ಚಿನ ಒತ್ತು ಕೊಡಬೇಕು. ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಬಳಸಬಾರದು. ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಸಸಿಗಳನ್ನು ಬೆಳೆಸಲು ಇದು ಸಕಾಲವಾಗಿದೆ ಎಂದರು.ಜಿಪಂ ಸಿಇಒ ಸದಾಶಿವ ಪ್ರಭು ಬಿ. ಅವರು ಮಾತನಾಡಿ, ಗಿಡಮರ ಸಂರಕ್ಷಣೆ ಮಾಡುವುದು ಬರೀ ಇಲಾಖೆಗಳ ಕಾರ್ಯವಲ್ಲ, ಸಾರ್ವಜನಿಕರೂ ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪರಿಸರ ಉಳಿವಿಗೆ ಕೈಜೋಡಿಸಬೇಕು. ವಿಜಯನಗರ ಜಿಲ್ಲೆಯಲ್ಲಿ ಪರಿಸರ ಸ್ನೇಹಿ ವಾತಾವರಣವಿದ್ದು, ಗಿಡ ಮರಗಳನ್ನು ಬೆಳಸಲು ಇಲ್ಲಿ ಹೆಚ್ಚಿನ ಅವಕಾಶವಿದೆ ಎಂದರು.
ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ., ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಜಿಲ್ಲಾಧಿಕಾರಿಗಳ ಕಚೇರಿ, ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು.