ದೇಶದ ಸಮಗ್ರತೆ, ಐಕ್ಯತೆ ಕಾಪಾಡಲು ಕೈಜೋಡಿಸೋಣ: ಸಚಿವ ರಹೀಂ ಖಾನ್

KannadaprabhaNewsNetwork |  
Published : Jan 27, 2026, 03:15 AM IST
ಬಳ್ಳಾರಿಯ ಬಿಎಂಸಿಆರ್‌ಸಿ ಮೈದಾನದ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.  | Kannada Prabha

ಸಾರಾಂಶ

ಮಹಾನ್ ಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನದಿಂದ ದೇಶದಲ್ಲಿ ಸರ್ವರಿಗೂ ಸಮಾನತೆ ಲಭಿಸಿದೆ.

ಬಳ್ಳಾರಿ: ಸಂವಿಧಾನದ ಪ್ರಸ್ತಾವನೆಯಲ್ಲಿ ದೇಶದ ಜನಜೀವನದ ಆಶೋತ್ತರಗಳು ಹುದುಗಿವೆ. ಅವುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಜೊತೆಗೂಡಿ ಪ್ರಯತ್ನಿಸಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ತಿಳಿಸಿದರು. ಜಿಲ್ಲಾಡಳಿತ ವತಿಯಿಂದ ನಗರದ ಬಿಎಂಸಿಆರ್‌ಸಿ ಮೈದಾನದ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು.ಮಹಾನ್ ಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನದಿಂದ ದೇಶದಲ್ಲಿ ಸರ್ವರಿಗೂ ಸಮಾನತೆ ಲಭಿಸಿದೆ. ನಮ್ಮ ದೇಶವು ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟ್ರವಾಗಿದ್ದು, ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಭಾವನೆಗಳು ಇವೆ ಎಂದರೆ ಅದು ಸಂವಿಧಾನ ನಮಗೆ ನೀಡಿರುವ ಕೊಡುಗೆಯಾಗಿದೆ. ಭಾರತ ದೇಶದ ಇತಿಹಾಸದಲ್ಲಿ ಆಗಸ್ಟ್ 15 ಮತ್ತು ಜನವರಿ 26 ಅತ್ಯಂತ ಮಹತ್ವದ ದಿನಗಳಾಗಿವೆ. ಜ.26ರಂದು ಇಡೀ ಸ್ವತಂತ್ರ ಭಾರತವನ್ನು ‘ಗಣರಾಜ್ಯ’ ಎಂದು ಘೋಷಿಸಲಾಯಿತು. ಭಾರತವು ಸಾರ್ವಭೌಮ ಗಣರಾಜ್ಯವಾಯಿತು. ಇದನ್ನು ಪ್ರಜಾರಾಜ್ಯೋತ್ಸವ ಎಂದು ಕರೆಯುತ್ತೇವೆ. ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ದಿನ ಇದಾಗಿದೆ ಎಂದು ತಿಳಿಸಿದರು.ಪ್ರಜಾಪ್ರಭುತ್ವದ ಬೆನ್ನೆಲುಬಾಗಿರುವ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ ಬಲಿಷ್ಠ ರಾಷ್ಟ್ರಕಟ್ಟುವ ಹಾಗೂ ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವ ಕಾರ್ಯದಲ್ಲಿ, ದೇಶದ ರಕ್ಷಣಾ ಕಾರ್ಯದಲ್ಲಿ ಯೋಧರೊಂದಿಗೆ ಪ್ರತಿಯೊಬ್ಬ ಭಾರತೀಯನು ಕೈಜೋಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಪ್ರತಿಪಾದಿಸಿದರು.ನಮ್ಮ ಸರ್ಕಾರವು ಬಡವರು, ರೈತರ ಪರವಾಗಿದೆ. ಎಲ್ಲರಿಗೂ ಸಮಾನತೆ ಕಲ್ಪಿಸಿದೆ. ನಮ್ಮ ಸರ್ಕಾರ ಬಂದ ಮೇಲೆ ಬಡ, ಶೋಷಿತ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪಣತೊಟ್ಟಿದ್ದು, ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರ, ರೈತರ, ನಗರ ಬಡಜನರ, ಸರ್ವರ ಆರ್ಥಿಕ ಹೊಣೆ ನಿಭಾಯಿಸಿದೆ ಎಂದರು.ನಗರಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ, ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ, ಸ್ವಚ್ಛ ಭಾರತ್ ಮಿಷನ್, ಅಮೃತ 2.0 ಯೋಜನೆ, 15ನೇ ಹಣಕಾಸು ಯೋಜನೆಗಳ ಮೂಲಕ ಪ್ರಗತಿ ಸಾಧಿಸಲಾಗಿದೆ. ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ಜಾಗಗಳಿಗೆ ಖಾತಾ ವಿತರಿಸುವ ಯೋಜನೆ ಜಾರಿಗೊಳಿಸಲಾಗಿದೆ ಎಂದರು.ಭಾರತವನ್ನು ಜಗತ್ತಿನ ಅತ್ಯಂತ ಪ್ರಬುದ್ಧ, ಪ್ರಗತಿಪರ, ಭದ್ರ, ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಲು ದೇಶಭಕ್ತಿ ಅಳವಡಿಸಿಕೊಳ್ಳುವ ಮೂಲಕ ನಾವೆಲ್ಲಾ ಒಂದಾಗಿ ಪ್ರಯತ್ನಿಸೋಣ. ಪ್ರೀತಿ-ವಿಶ್ವಾಸ ಹಂಚುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಎಲ್ಲರೂ ಸಹಕರಿಸಬೇಕು. ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಜನತೆಯ ಸಹಕಾರದೊಂದಿಗೆ ಪ್ರಗತಿಯನ್ನು ಸಾಧಿಸಲಿದೆ ಎಂದು ಅಭಿಮತ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ ಇಲಾಖೆ, ಗೃಹರಕ್ಷಕ ದಳ ಇಲಾಖೆ ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಮವಸ್ತ್ರದಲ್ಲಿ ಶಿಸ್ತುಬದ್ದ ಪಥಸಂಚಲನ ನಡೆಯಿತು.ಗಣರಾಜ್ಯೋತ್ಸವದ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.ಬಳಿಕ ಶಾಲಾ ಶಿಕ್ಷಣ ಇಲಾಖೆಯ ವಿವಿಧ ಮಾಧ್ಯಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವದ ನಿಮಿತ್ತ ಸಾಮೂಹಿಕ ನೃತ್ಯ, ದೇಶ ಭಕ್ತಿಗೀತೆ, ವೇಷಧಾರಿ ಒಳಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಸಂಸದ ಈ.ತುಕಾರಾಮ್, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಪಾಲಿಕೆಯ ಮಹಾಪೌರ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪಾಲಿಕೆ ಉಪಮೇಯರ್ ಮುಬೀನಾ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಎಸ್ಪಿ ಡಾ.ಸುಮನ್ ಡಿ ಪೆನ್ನೇಕರ್, ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್, ಎಡಿಸಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

₹400 ಕೋಟಿ ದರೋಡೆ ಕೇಸ್‌ನ ಸಂಭಾಷಣೆ ಆಡಿಯೋ ವೈರಲ್‌!
ಇಂದಿನಿಂದ ಮತ್ತೆ ಕಲಾಪ : ಭಾರೀ ಕೋಲಾಹಲ ನಿರೀಕ್ಷೆ