ತಂಬಾಕು ಉತ್ಪನ್ನ ಕಾಯ್ದೆ ಉಲ್ಲಂಘಿಸಿದ್ರೆ ಪರವಾನಗಿ ರದ್ದು

KannadaprabhaNewsNetwork |  
Published : Oct 21, 2025, 01:00 AM IST
ತಂಬಾಕು ಉತ್ಪನ್ನ ಕಾಯ್ದೆ ಪದೇ ಪದೇ ಉಲ್ಲಂಘಿಸುವ ಮಾರಾಟಗಾರರ ಪರವಾನಗಿ ರದ್ದುಪಡಿ | Kannada Prabha

ಸಾರಾಂಶ

ತಂಬಾಕು ಉತ್ಪನ್ನ ಸಂಬಂಧ ಕೋಟ್ಪಾ ಕಾಯ್ದೆಯನ್ನು ಪದೇ ಪದೆ ಉಲ್ಲಂಘಿಸುವ ತಂಬಾಕು ಉತ್ಪನ್ನ ಮಾರಾಟಗಾರರ ಪರವಾನಗಿಯನ್ನು ರದ್ದುಪಡಿಸಲು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ತಂಬಾಕು ಉತ್ಪನ್ನ ಸಂಬಂಧ ಕೋಟ್ಪಾ ಕಾಯ್ದೆಯನ್ನು ಪದೇ ಪದೆ ಉಲ್ಲಂಘಿಸುವ ತಂಬಾಕು ಉತ್ಪನ್ನ ಮಾರಾಟಗಾರರ ಪರವಾನಗಿಯನ್ನು ರದ್ದುಪಡಿಸಲು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕುರಿತ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತನಿಖಾ ತಂಡವು ಕೋಟ್ಪಾ ಕಾಯ್ದೆ ಅನುಸಾರ ಪರಿಶೀಲನೆ ಕಾರ್ಯಾಚರಣೆ ಸಂದರ್ಭದಲ್ಲಿ ಪುನರಾವರ್ತಿತ ಉಲ್ಲಂಘನೆ ಮಾಡಿರುವ ಬಗ್ಗೆ ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ವ್ಯಾಪಾರ ಪರವಾನಗಿಯನ್ನು ರದ್ದುಪಡಿಸಬೇಕು. ನಗರ ಪಟ್ಟಣ ಪ್ರದೇಶಗಳಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ವ್ಯಾಪ್ತಿಗೆ ಒಳಪಡುವ ಇಲಾಖೆಗಳು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಶೈಕ್ಷಣಿಕ ಸಂಸ್ಥೆಗಳ 100 ಮೀ ಅಂತರದಲ್ಲಿ ಬೀಡಿ ಸಿಗರೇಟ್ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಇಂತಹ ಪ್ರದೇಶವನ್ನು ತಂಬಾಕು ಮುಕ್ತವಲಯ ಎಂದು ಘೋಷಣೆಯಾಗಿರಬೇಕು. ಜಿಲ್ಲೆಯಲ್ಲಿ ಶೇ.100ರಷ್ಟು ಈ ಸಂಬಂಧ ಅನುಷ್ಠಾನವಾಗಬೇಕು. ಶೈಕ್ಷಣಿಕ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾನೂನು ನಿಯಮಗಳು ಉಲ್ಲಂಘನೆ ಮಾಡಿರುವುದು ಕಂಡು ಬಂದಲ್ಲಿ ಗರಿಷ್ಠ ಪ್ರಮಾಣದಲ್ಲಿ ದಂಡ ವಿಧಿಸುವಂತೆ ನಿರ್ದೇಶನ ನೀಡಿದರು.

ತಂಬಾಕು ವ್ಯಸನಿಗಳು ಹೆಚ್ಚು ಸಂಖ್ಯೆಯಲ್ಲಿರುವ ಗುರುತಿಸಲಾದ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಬೇಕು. ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ದುಷ್ಪರಿಣಾಮಗಳು ಹಾಗೂ ತಂಬಾಕು ವ್ಯಸನದಿಂದ ಕುಟುಂಬದ ಮೇಲೆ ಬೀರಬಹುದಾದ ತೊಂದರೆಗಳನ್ನು ತಪ್ಪಿಸಲು ವಿಶೇಷವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಈ ಬಗ್ಗೆ ಮುಂದಿನ ಸಭೆಯಲ್ಲಿ ವಹಿಸಲಾದ ಕ್ರಮಗಳ ಬಗ್ಗೆ ವಿವರಿಸಲು ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಿಲ್ಲೆಯಲ್ಲಿ 68 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳೆಂದು ಘೋಷಿಸಲು ಗುರಿ ಹೊಂದಲಾಗಿದೆ. ಇಂತಹ ಗ್ರಾಮಗಳಲ್ಲಿ ನಿಗದಿಪಡಿಸಿರುವ ಮಾರ್ಗಸೂಚಿ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಪರಿಣಾಮಕಾರಿ ಅನುಷ್ಠಾನಕ್ಕೆ ವಿವಿಧ ಇಲಾಖೆಗಳು ಸಹಕರಿಸಬೇಕು. ವಿಶೇಷವಾಗಿ ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಧೂಮಪಾನ ಸೇವನೆ ಮಾಡುವಂತಿಲ್ಲ. ಇದಕ್ಕಾಗಿಯೇ ಗುರುತಿಸಲಾದ ಹಾಗೂ ಅನುಮತಿಸಲಾದ ವಲಯಗಳು ಇರಬೇಕು. ರಾಷ್ಟ್ರೀಯ ತಂಬಾಕು ನಿಯಂತ್ರಣ, ಮದ್ಯ ಮಾದಕ ವಸ್ತುಗಳ ಸೇವನೆ ವಿರುದ್ದ ಕಾಯ್ದೆ ಅನುಷ್ಠಾನ ಸಂಬಂಧ ಸಭೆಗಳಲ್ಲಿ ವಿಸೃತವಾಗಿ ಚರ್ಚೆ ಮಾಡಿ ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ಸುಂದರೇಶ್, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಶೇಖರ್, ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ. ರವಿಕುಮಾರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಸುಧಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮುನಿರಾಜು, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಗಡಿ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌
ನಟ ಯಶ್‌ಗೆ ಜಾರಿಯಾಗಿದ್ದ ಆದಾಯ ತೆರಿಗೆ ನೋಟಿಸ್‌ ರದ್ದು