ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾತ್ಕಾಲಿಕ ಪರವಾನಗಿ ಪಡೆದ ಮಳಿಗೆಗಳಲ್ಲಿ ಬೆಳಗ್ಗೆ ೮ ರಿಂದ ರಾತ್ರಿ ೮ರ ವರೆಗೆ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಬೇಕು. ಪರವಾನಗಿ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಸಬೇಕು. ಅರ್ಜಿದಾರರು ಸೂಚಿಸುವ ಸ್ಥಳವನ್ನು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಪರಿಶೀಲಿಸಿ, ಎಲ್ಲ ಸುರಕ್ಷತಾ ಮಾನದಂಡಗಳನ್ನು ಪೂರೈಸಿರುವುದು ಖಚಿತವಾದ ಬಳಿಕವೇ ಪರವಾನಗಿ ನೀಡಬೇಕು ಎಂದರು.
ಪಟಾಕಿ ಮಳಿಗೆಗಳನ್ನು ರಸ್ತೆ ಬದಿ, ಜನನಿಬಿಡ ಹಾಗೂ ವಸತಿ ಪ್ರದೇಶಗಳಲ್ಲಿ ಅಥವಾ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುವ ಸ್ಥಳಗಳಲ್ಲಿ ಸ್ಥಾಪಿಸಲು ಅವಕಾಶ ನೀಡಬಾರದು. ಪ್ರತಿ ತಾಲೂಕಿನಲ್ಲಿ ಸುರಕ್ಷಿತ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದ ಸೂಕ್ತ ಸ್ಥಳಗಳನ್ನು ಪೂರ್ವಭಾವಿಯಾಗಿ ಗುರುತಿಸಿ. ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.ಮಳಿಗೆಗಳ ನಡುವೆ ನಿಗದಿತ ಅಂತರ, ತುರ್ತು ವಾಹನಗಳ ಸಂಚಾರಕ್ಕೆ ಅಗತ್ಯ ಸ್ಥಳಾವಕಾಶ, ಅಗ್ನಿಶಾಮಕ ಸಾಧನಗಳು ಹಾಗೂ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳು ಕಡ್ಡಾಯವಾಗಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಮಳಿಗೆ ನಿರ್ಮಾಣ ಹಾಗೂ ಪಟಾಕಿ ಸಂಗ್ರಹಣೆಯಲ್ಲಿ ನಿಗದಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಜಿಲ್ಲಾಧಿಕಾರಿ ಕಚೇರಿಯ ಯೋಜನಾ ನಿರ್ದೇಶಕ ಚಂದ್ರಶೇಖರ್, ತಹಸಿಲ್ದಾರ್ ವಿಶ್ವನಾಥ್, ಡಿವೈಎಸ್ಪಿ ಎಚ್.ಪಿ.ಸತೀಶ್, ಅಗ್ನಿಶಾಮಕ ದಳದ ಅಧಿಕಾರಿ ರಾಘವೇಂದ್ರ, ಪರಿಸರ ಇಲಾಖೆಯ ಹಿರಿಯ ಅಧಿಕಾರಿ ಗೀತಾ ಇತರರಿದ್ದರು.