ಜಾಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ
ಜಾಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಪ್ರಾಂಶುಪಾಲ ನಾಗೇಶ ಶೆಟ್ಟಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸಾಹಿತ್ಯ ಅಕ್ಷರಗಳ ಜೋಡಣೆಯಲ್ಲ. ಸಮಾಜ ಸುಧಾರಣೆಗೆ ದಾರಿ ತೋರಿಸುವ ಬೆಳಕಾಗಿದೆ. ಒಂದು ಕಾಲಕ್ಕೆ ಪುಸ್ತಕ ರೂಪದಲ್ಲಿಯೇ ವಿಚಾರಗಳನ್ನು ಅಭಿವ್ಯಕ್ತಿ ಪಡಿಸಬೇಕಾಗಿತ್ತು. ಆದರೆ ಇಂದು ಕಾಲ ಬದಲಾಗಿದೆ. ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ವೈಚಾರಿಕ ಚಿಂತನೆ, ಸೃಜನಶೀಲ ಬರೆವಣಿಗೆಗಳನ್ನು ದಾಟಿಸಬಹುದು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಏಕೀಕರಣ ಸಂದರ್ಭದಲ್ಲಿ ಮುಖ್ಯ ಪಾತ್ರ ವಹಿಸಿದ್ದ ಸಾಹಿತ್ಯ ಪರಿಷತ್ತನ್ನು ಹಾಗೆಯೇ ಅದರ ಸಂಸ್ಥಾಪಕರನ್ನು ಸದಾ ಸ್ಮರಿಸಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದರು.ಅಧ್ಯಕ್ಷತೆ ವಹಿಸಿದ್ದ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆ. ಕನ್ನಡ ಸಾಹಿತ್ಯ, ಲೇಖಕರನ್ನು ಉತ್ತೇಜಿಸುವುದು, ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸುವ ಮೂಲಕ ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ ಕಾರ್ಯವನ್ನು ಪರಿಷತ್ತು ಮಾಡುತ್ತಿದೆ. ಎಲ್ಲ ವಿದ್ಯಾರ್ಥಿಗಳು ಪರಿಷತ್ತಿನ ಆಜೀವ ಸದಸ್ಯತ್ವ ಪಡೆದುಕೊಳ್ಳಬೇಕೆಂದು ಕರೆ ನೀಡಿದರಲ್ಲದೇ, ನಮ್ಮ ನಾಡು ನುಡಿಗೆ ನಮ್ಮ ನೆಲೆಯಲ್ಲಿ ಕೊಡುಗೆ ನೀಡುವಂತಾಗಬೇಕು ಎಂದು ನುಡಿದರು.