ಮಕ್ಕಳ ಶೈಕ್ಷಣಿಕ ಚಟುವಟಿಕೆಗ ಅನುಕೂಲ । ಶಿಕ್ಷಣ ಇಲಾಖೆಯ ಮಹತ್ವದ ಯೋಜನೆ
ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಶೀಘ್ರದಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಟ್ಟಣದ ಡಾ.ರಾಜ್ ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶೈಕ್ಷಣಿಕ ವರ್ಷದಿಂದ ಆರಂಭವಾಗುವ ಎಲ್ಲಾ ಎಲ್‌ಕೆಜಿ ಮತ್ತು ಯುಕೆಜಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಉಚಿತವಾಗಿ ನಡೆಸಲಾಗುವುದು. ವಿಶೇಷವಾಗಿ ಮೂಲಭೂತ ಸೌಕರ್ಯ ಹೊಂದಿರುವ ಶಾಲೆಗಳಲ್ಲಿ ತರಗತಿಗಳ ಆರಂಭಕ್ಕೆ ಆದ್ಯತೆ ನೀಡಲಾಗುವುದು ಎಂದರು.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದು, ಮಕ್ಕಳು ಅವರಿಂದ ಬೋಧನೆಯ ಲಾಭ ಪಡೆದು, ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶಾಲಾರಂಭದ ಮೊದಲ ದಿನ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳನ್ನು ಸ್ವಾಗತಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಸಮೀಪದ ಶಾಲೆಯಲ್ಲಿ ಹಾಜರಿರುವಂತೆ ಸೂಚಿಸಿದರು.
ತಾಲೂಕಿನಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಅಗತ್ಯ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳಲು ಸೂಚಿಸಲಾಗಿದೆ. ದಿನೇದಿನೇ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೋಲಾರ್ ವಿದ್ಯುತ್ ಉತ್ಪಾದಿಸಿ ಬಳಸಲು ಪ್ರೇರೇಪಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಜನಪ್ರಿಯವಾಗಿರುವ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಕುರಿತು ಕಾಲಕಾಲಕ್ಕೆ ಸಭೆಗಳನ್ನು ನಡೆಸಿ, ಮಾಧ್ಯಮಗಳಿಗೆ ವಿವರಿಸುವಂತೆ ತಹಶೀಲ್ದಾರರಿಗೆ ಸೂಚಿಸಿದ ಸಚಿವರು, ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ವಾಸ್ತವ ಸಂಗತಿಗಳ ಕುರಿತು ಮನವರಿಕೆ ಮಾಡಿಕೊಡಬೇಕು ಎಂದರು.
ನರೇಗಾ ಯೋಜನೆಯಡಿ ಮಾನವದಿನಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಕಾಂಪೌಂಡ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳು ಪ್ರಸ್ತಾವನೆ ಸಿದ್ದಪಡಿಸಿ, ಅನುಮೋದನೆ ಪಡೆದು ಕಾಮಗಾರಿಗಳನ್ನು ನಡೆಸಬೇಕು. ಇದರಿಂದಾಗಿ ಹೆಚ್ಚಿನ ಜನರಿಗೆ ಕೂಲಿ ಕೆಲಸ ದೊರೆಯಲಿದೆ ಎಂದರು.