ಯುವ ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ

KannadaprabhaNewsNetwork |  
Published : Aug 26, 2025, 01:02 AM IST

ಸಾರಾಂಶ

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಜರುಗಲಿರುವ ದಸರಾ ಉತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗುವ ಯುವ ದಸರಾ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ

ಕನ್ನಡಪ್ರಭ ವಾರ್ತೆ, ತುಮಕೂರು

ನಗರದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಜರುಗಲಿರುವ ದಸರಾ ಉತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗುವ ಯುವ ದಸರಾ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಕಾರ್ಯಕ್ರಮವನ್ನು ವೈಭವಪೂರಿತವಾಗಿ ರೂಪಿಸಬೇಕೆಂದು ಜಿಪಂ ಸಿಇಒ ಜಿ. ಪ್ರಭು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಅವರಿಗೆ ನಿರ್ದೇಶನ ನೀಡಿದರು.

ಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕುರಿತು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ದಸರಾ ಸಾಂಸ್ಕೃತಿಕ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಕಲಾವಿದರ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು. ತುಮಕೂರು ದಸರಾ ಹಬ್ಬವನ್ನು ಈ ಬಾರಿಯು ಕೂಡ ವಿಜೃಂಭಣೆಯಿಂದ ಮತ್ತು ವೈಭವಪೂರ್ಣವಾಗಿ 11 ದಿನಗಳ ಕಾಲ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರತಿ ದಿನ ಸಂಜೆ 4 ರಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ನೃತ್ಯ, ನಾಟಕ, ಸಂಗೀತ ಸೇರಿದಂತೆ ವಿವಿಧ ಕಲಾಪ್ರದರ್ಶನಗಳು ನಡೆಯಲಿವೆ. ದಸರಾ ಸಂಭ್ರಮಾಚರಣೆಯಲ್ಲಿ ಆಯೋಜಿಸಲಾಗುವ ವಸ್ತು ಪ್ರದರ್ಶನವು ಪ್ರಮುಖ ಆಕರ್ಷಣೆಯಾಗಿದ್ದು, ಕಳೆದ ಬಾರಿಯಂತೆ ಈ ವರ್ಷವೂ ಕೂಡ ವಿವಿಧ ಇಲಾಖೆಗಳಿಂದ ವೈವಿಧ್ಯಮಯ ವಸ್ತು ಪ್ರದರ್ಶನವನ್ನು ಏರ್ಪಡಿಸಬೇಕು. ಕೃಷಿ, ಕೈಗಾರಿಕೆ, ವಿಜ್ಞಾನ, ತಂತ್ರಜ್ಞಾನ, ಆರೋಗ್ಯ, ಶಿಕ್ಷಣ, ಮಹಿಳಾ ಹಾಗೂ ಮಕ್ಕಳ ಕಲಾ ಕೌಶಲ್ಯಗಳ ನೂತನ ಸಾಧನೆಗಳು ಪ್ರದರ್ಶನವಾಗಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಸ್ತು ಪ್ರದರ್ಶನದಲ್ಲಿ ಮಕ್ಕಳಿಗಾಗಿ ಆಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನವೀನ ಆವಿಷ್ಕಾರಗಳು, ಜಿಲ್ಲೆಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರಮುಖ ಸಾಧನೆಗೈದ ವ್ಯಕ್ತಿಗಳ ಪರಿಚಯವನ್ನು ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಾಲ ಗುರುಮೂರ್ತಿ, ಕೃಷಿ ಜಂಟಿ ನಿರ್ದೇಶಕ ರಮೇಶ್, ದಸರಾ ಸಾಂಸ್ಕೃತಿಕ ಸಮಿತಿಯ ಸದಸ್ಯ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ