ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ, ಜೆಡಿಎಸ್ ಮೈತ್ರಿಯೋ, ಪೈಪೋಟಿಯೋ?

KannadaprabhaNewsNetwork |  
Published : Oct 14, 2026, 02:00 AM IST
ಫೋಟೋ | Kannada Prabha

ಸಾರಾಂಶ

ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸೂಚನೆ ನೀಡಲಾಗಿದ್ದರೂ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉಭಯ ಪಕ್ಷಗಳು ಯಾವ ನಿಲುವು ತಳೆಯಲಿವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸೋಮರಡ್ಡಿ ಅಳವಂಡಿ

ಕೊಪ್ಪಳ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ಸಿದ್ಧತೆ ಚುರುಕುಗೊಳಿಸಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳಬೇಕೋ ಅಥವಾ ಪ್ರತ್ಯೇಕವಾಗಿ ಸ್ಪರ್ಧಿಸಬೇಕೋ ಎಂಬ ಚಿಂತೆಯಲ್ಲಿದ್ದಾರೆ. ಈ ಕುರಿತು ಹೈಕಮಾಂಡ್‌ನಿಂದ ಇನ್ನೂ ಸ್ಪಷ್ಟ ಸೂಚನೆ ಬಾರದಿರುವುದು ಚುನಾವಣಾ ಸಿದ್ಧತೆ ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಅಡ್ಡಿಯಾಗಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸೂಚನೆ ನೀಡಲಾಗಿದ್ದರೂ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉಭಯ ಪಕ್ಷಗಳು ಯಾವ ನಿಲುವು ತಳೆಯಲಿವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೆಲ ದಿನಗಳ ಹಿಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮೈತ್ರಿಯಾಗಿಯೇ ಎದುರಿಸುವುದಾಗಿ ಹೇಳಿದ್ದರೂ, ಜೆಡಿಎಸ್ ಪಕ್ಷದಿಂದ ಈ ಕುರಿತು ಅಧಿಕೃತ ಸ್ಪಷ್ಟನೆ ಹೊರಬಿದ್ದಿಲ್ಲ.

ಹೀಗಾಗಿ ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಹೋಲಿಸಿದರೆ ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಚುನಾವಣಾ ಸಿದ್ಧತೆ ಅಷ್ಟಾಗಿ ಗೋಚರಿಸುತ್ತಿಲ್ಲ. ಮೈತ್ರಿ ನಿರ್ಧಾರ ಪ್ರಕಟವಾಗದಿರುವುದರಿಂದ ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆ, ಕಾರ್ಯಕರ್ತರ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರ ರೂಪಿಸುವುದು ಸ್ಥಳೀಯ ನಾಯಕರಿಗೆ ಸವಾಲಾಗಿದೆ.

ಕ್ಷೇತ್ರ ಹಂಚಿಕೆಯದ್ದೇ ಚಿಂತೆ: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯ ಯಾವ ಕ್ಷೇತ್ರವನ್ನು ಯಾವ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬುದೇ ದೊಡ್ಡ ಪ್ರಶ್ನೆಯಾಗಲಿದೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿರುವ ಎರಡೂ ಪಕ್ಷಗಳ ಆಕಾಂಕ್ಷಿಗಳು ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಮೈತ್ರಿ ಒಪ್ಪಂದದಲ್ಲಿ ತಮ್ಮ ಕ್ಷೇತ್ರ ಮತ್ತೊಂದು ಪಕ್ಷದ ಪಾಲಾದರೆ ಏನು ಮಾಡಬೇಕು ಎಂಬ ಚಿಂತೆ ಅವರನ್ನು ಕಾಡುತ್ತಿದೆ.

ಮೈತ್ರಿಯಾದರೆ ಕಾಂಗ್ರೆಸ್ ಎದುರಿಸಲು ಅನುಕೂಲವಾಗಬಹುದು. ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಎರಡೂ ಪಕ್ಷಗಳ ಮತಗಳು ವಿಭಜನೆಯಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅನುಕೂಲವಾಗಬಹುದು ಎಂಬ ಲೆಕ್ಕಾಚಾರವೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿದೆ. ಆದರೆ ಈ ಕುರಿತು ಜಿಲ್ಲೆಯ ನಾಯಕರು ಇನ್ನೂ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಹೈಕಮಾಂಡ್ ನಿರ್ದೇಶನ ಬಂದ ಬಳಿಕವೇ ನಿರ್ಧಾರ ಕೈಗೊಳ್ಳುವುದಾಗಿ ನಾಯಕರು ಹೇಳುತ್ತಿರುವುದರಿಂದ ಆಕಾಂಕ್ಷಿಗಳು ಕಾಯುವಂತಾಗಿದೆ.

ಹಿರೇಸಿಂದೋಗಿ ಕ್ಷೇತ್ರದಲ್ಲಿ ಪೈಪೋಟಿ: ಹಿರೇಸಿಂದೋಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಆಕಾಂಕ್ಷಿಗಳು ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್‌ನಲ್ಲಿಯೂ ಟಿಕೆಟ್‌ಗಾಗಿ ಪೈಪೋಟಿ ಇದೆ. ಇಂತಹ ಸಂದರ್ಭದಲ್ಲಿ ಮೈತ್ರಿ ಏರ್ಪಟ್ಟರೆ ಕ್ಷೇತ್ರವನ್ನು ಯಾವ ಪಕ್ಷಕ್ಕೆ ಬಿಟ್ಟುಕೊಡಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಜಿಲ್ಲೆಯ ಇತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದೆ. ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ನಾಯಕರು ತಮ್ಮ ಬೆಂಬಲಿಗರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟಿಕೆಟ್ ಕೊಡಿಸಲು ಪ್ರಯತ್ನಿಸುವುದರಿಂದ ಪಕ್ಷದೊಳಗಿನ ಪೈಪೋಟಿಯೂ ಹೆಚ್ಚಾಗಬಹುದು. ಹೀಗಾಗಿ ಮೈತ್ರಿ ನಿರ್ಧಾರದ ಜತೆಗೆ ಕ್ಷೇತ್ರಗಳ ಹಂಚಿಕೆಯೂ ಉಭಯ ಪಕ್ಷಗಳಿಗೆ ಸವಾಲಾಗಲಿದೆ.

ಶೀಘ್ರದಲ್ಲಿಯೇ ಸಭೆ: ಮೈತ್ರಿ ಕುರಿತು ಇನ್ನೂ ಏನೂ ಹೇಳಿಲ್ಲ. ಶೀಘ್ರದಲ್ಲಿಯೇ ಸಭೆ ಕರೆದು ತೀರ್ಮಾನ ಮಾಡುತ್ತಾರೆ. ಈಗಿರುವ ಮಾಹಿತಿಯ ಪ್ರಕಾರ ಮೈತ್ರಿಯೇ ಆಗುತ್ತದೆ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುರೇಶ ಭೂಮರಡ್ಡಿ ತಿಳಿಸಿದರು.

ಹೈಕಮಾಂಡ್ ತೀರ್ಮಾನ: ಮೈತ್ರಿಯ ಕುರಿತು ಶೀಘ್ರದಲ್ಲಿಯೇ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಈ ಕುರಿತು ಪಕ್ಷದ ನಾಯಕರು ಅಭಿಪ್ರಾಯ ಪಡೆದು, ಹಂಚಿಕೆ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ನವೀನ ಗುಳಣ್ಣವರ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತಯಾಚನೆ ವೇಳೆ ಸಂಕನೂರ ಪರ ಎಲ್ಲೆಡೆ ಉತ್ತಮ ಸ್ಪಂದನೆ
ವಿವಾಹಿತೆ ಸಾವು: ಪತಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು