ರಾಜ್ಯದ ಮಕ್ಕಳಿಗೆ ಸಿಹಿ ಕೊಡುಗೆ । ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಪ್ರಸ್ತಾವನೆ । ರಾಜ್ಯ ಸರ್ಕಾರ ಆದೇಶ
ಕನ್ನಡಪ್ರಭ ವಾರ್ತೆ ಕುಕನೂರು
ಮೆರಿಟ್ ಬಂದಿಲ್ಲ ಎಂದು ವಸತಿ ಶಾಲೆಗಳ ಶಿಕ್ಷಣದಿಂದ ವಂಚಿತರಾಗುತ್ತಿದ್ದ ಸ್ಥಳೀಯ ಮಕ್ಕಳಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ವಸತಿ ಶಾಲೆಗಳಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ. 75ರಷ್ಟು ರಾಜ್ಯದ ಉಳಿದ ಭಾಗದ ಮಕ್ಕಳಿಗೆ ಶೇ. 25ರಷ್ಟು ಮೀಸಲಾತಿ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.ಗಮನ ಸೆಳೆದ ಶಾಸಕ:
ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್, ವಾಜಪೇಯಿ ಸೇರಿದಂತೆ ಇತರ ವಸತಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆದ್ಯತೆ ಮೇಲೆ ವಸತಿ ನಿಲಯಗಳಲ್ಲಿ ಪ್ರವೇಶ ಕಲ್ಪಿಸಿಕೊಡುವಂತೆ ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರು ಸಲ್ಲಿಸಿದ ಪ್ರಸ್ತಾವನೆಗೆ ಸರ್ಕಾರ ಗ್ರೀನ್ ಸ್ನೀಗಲ್ ನೀಡಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ವಸತಿ ಶಾಲೆಗಳಲ್ಲಿ ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷದಿಂದ ೬ ನೇ ತರಗತಿಗೆ ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿವೆ. ಈ ಹಿನ್ನೆಲೆ ಸ್ಥಳೀಯ ಅಭ್ಯರ್ಥಿಗಳಿಗೆ ಶೇ. ೭೫ ಹಾಗೂ ಜಿಲ್ಲೆಯ ಅನ್ಯ ತಾಲೂಕಿನ ಅಭ್ಯರ್ಥಿಗಳಿಗೆ ಶೇ.೨೫ರ ಅನುಪಾತ ಜಾರಿ ಮಾಡಿ ಸರ್ಕಾರ ರಾಜ್ಯಾದ್ಯಂತ ಏಕರೂಪ ಆದೇಶ ಜಾರಿ ಮಾಡಿದೆ.
ಇತ್ತೀಚಿನ ವರ್ಷಗಳಲ್ಲಿ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆದುಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಪ್ರವೇಶ ಬಯಸಿ ಬರುವ ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಬೇಕು ಎನ್ನುವ ಉದ್ದೇಶ ಇಟ್ಟುಕೊಂಡು ಸಿಎಂಗೆ ಪತ್ರ ಬರೆದಿದ್ದೆ. ನನ್ನ ಪತ್ರಕ್ಕೆ ಸ್ಪಂದಿಸಿರುವ ಸಿಎಂ ರಾಜ್ಯದ ನಾನಾ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಅನ್ವಯವಾಗುವ ನಿಟ್ಟಿನಲ್ಲಿ ಏಕರೂಪದ ಆದೇಶ ಹೊರಡಿಸಿದ್ದಾರೆ. ನಮ್ಮ ಭಾಗದ ವಿದ್ಯಾರ್ಥಿಗಳಿಗೆ ಆದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ಅವಕಾಶ ದೊರೆಯಲಿವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.