- ರಾಜಿಪೂರ್ವ ಸಮಾಲೋಚನೆಗಳು ಕೂಡ ಆಯೋಜನೆ- - - ಕನ್ನಡಪ್ರಭ ವಾರ್ತೆ ದಾವಣಗೆರೆ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 12ರಂದು ಬೃಹತ್ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಲಾಗಿದೆ. ಈ ಸಲುವಾರಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದಿದ್ದಾರೆ.
ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ರಾಜಿಯಾಗಬಲ್ಲ ಎಲ್ಲ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳಾದ ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇಧನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ, ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು. ರಾಜಿ ಬಗ್ಗೆ ಅನುಕೂಲವಾಗಲಿ ಎಂದು ರಾಜಿಪೂರ್ವ ಸಮಾಲೋಚನೆಗಳನ್ನು ಕೂಡ ಆಯೋಜಿಸಲಾಗಿದೆ ಎಂದಿದ್ದಾರೆ.ಸಾರ್ವಜನಿಕರು ಜುಲೈ 12ರ ಲೋಕ್ ಆದಾಲತ್‌ನ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದೂ: 08192-296364, ತಾಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ- ದೂ: 08192-296885, ಹೊನ್ನಾಳಿ: 08188-251732, ಚನ್ನಗಿರಿ: 08189-229195, ಜಗಳೂರು: 08196-227600 ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
- - - (-ಫೋಟೋ)