ಲೋಕಸಭಾ ಚುನಾವಣೆಗೆ ಬೆಂ.ಗ್ರಾ. ಜಿಲ್ಲಾಡಳಿತ ಸನ್ನದ್ಧ

KannadaprabhaNewsNetwork | Published : Mar 18, 2024 1:46 AM

ಸಾರಾಂಶ

ಭಾರತ ಚುನಾವಣಾ ಆಯೋಗ 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024ರ ಏ.26ರಂದು ಮತದಾನ ನಡೆಯಲಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಭಾರತ ಚುನಾವಣಾ ಆಯೋಗ 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024ರ ಏ.26ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಮಾದರಿ ನೀತಿ ಸಂಹಿತೆ ಶನಿವಾರದಿಂದಲೇ ಜಿಲ್ಲಾದ್ಯಂತ ಜಾರಿಯಲ್ಲಿರುತ್ತದೆ ಎಂದು ಬೆಂ.ಗ್ರಾ. ಜಿಲ್ಲಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗದ ಚುನಾವಣಾ ವೇಳಾ ಪಟ್ಟಿಯಂತೆ ಮಾ.28ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರ ಸಲ್ಲಿಸಲು ಏ.4 ಕೊನೆಯ ದಿನವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ, 8ರಂದು ಹಿಂಪಡೆಯಲು ಕೊನೆಯ ದಿನವಾಗಿದ್ದು, 26ರಂದು ಮತದಾನ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ನಡೆಯಲಿದ್ದು, 6ಕ್ಕೆ ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ವಿವರಿಸಿದರು.

ಮತದಾನ ಪ್ರಮಾಣ ಹೆಚ್ಚಳಕ್ಕೆ ಜಾಗೃತಿ:

ಬೆಂ.ಗ್ರಾ. ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಡಾ.ಕೆ.ಎನ್ ಅನುರಾಧ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ಹೆಚ್ಚಿಸಲು ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಮುಂದಿನ ದಿನಗಳಲ್ಲಿ ಹಿಂದಿನ ಚುನಾವಣೆಗಳಲ್ಲಿ ಕಡಿಮೆ ಮತದಾನ ನಡೆದ ಮತ ಕೇಂದ್ರಗಳನ್ನು ಗಮನದಲ್ಲಿಟ್ಟುಕೊಂಡು ಜಾಗೃತಿ ಮೂಡಿಸಲಾಗುವುದು ಎಂದರು.

ಮತದಾನ‌ ಪ್ರಮಾಣ ಹೆಚ್ಚಿಸಲು ಅಗತ್ಯ ಸಿದ್ಧತೆ ಕೈಗೊಳುತ್ತೇವೆ. ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಉಲ್ಲಂಘನೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ನಡೆಸಿದ್ದು ಸಾರ್ವಜನಿಕರು ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಉಲ್ಲಂಘನೆಯಲ್ಲಿ ಮಾಹಿತಿ ನೀಡಬಹುದು ಎಂದು ಅವರು ಹೇಳಿದರು.

ಜಿಲ್ಲಾ, ತಾಲೂಕು ಗಡಿಗಳಲ್ಲಿ ಹದ್ದಿನ ಕಣ್ಣು!

ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಮಾತನಾಡಿ, ಜಿಲ್ಲೆಯಲ್ಲಿ ಇಂದಿನಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಜಿಲ್ಲಾದ್ಯಂತ 21 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗುತ್ತಿದ್ದು, ತಮಿಳುನಾಡಿಗೆ ಹೊಂದಿಕೊಂಡಂತೆ ಹೊಸಕೋಟೆ ಬಳಿಯ ಬಾಗೂರು ಬಳಿ ಚೆಕ್ಪೋಸ್ಟ್ ನಿರ್ಮಿಸಲಾಗಿದೆ, ಅಂತರ್ ಜಿಲ್ಲೆಯಲ್ಲಿ 13 ಚೆಕ್ ಪೋಸ್ಟ್ ಗಳು, ಜಿಲ್ಲೆಯ ಒಳಗೆ 8 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ ಎಂದರು.

ಫ್ಲೆಕ್ಸ್‌-ಬ್ಯಾನರ್‌ಗಳು ತೆರವು:

ಜಿಲ್ಲೆಯಲ್ಲಿರುವ ಎಲ್ಲಾ ಫ್ಲೆಕ್ಸ್ ಬ್ಯಾನರ್ ಗಳನ್ನು ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ತೆರವುಗೊಳಿಸಲಾಗಿದೆ. ಪರವಾನಿಗೆ ಹೊಂದಿದ ಶಸ್ತ್ರಾಸ್ರಗಳನ್ನು ಹಿಂಪಡೆಯಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಂಡು ಶಾಂತ ರೀತಿಯಲ್ಲಿ ಚುನಾವಣೆ ನಡೆಸಲು ಸನ್ನದ್ಧರಾಗಿದ್ದೇವೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

Share this article