ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಲೋಕಸಭಾ ಚುನಾವಣೆ: ಇಂದಿನಿಂದ ಜಿಲ್ಲಾದ್ಯಂತ ನಿಷೇದಾಜ್ಞೆ

KannadaprabhaNewsNetwork | Published : Apr 24, 2024 2:20 AM

ಜಿಲ್ಲೆಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಮತದಾನ ಕೇಂದ್ರದ ಸುತ್ತ-ಮುತ್ತ ಮುಂತಾದವುಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನವು ನಡೆಯಲಿದ್ದು, ಏಪ್ರಿಲ್ 24 ರಂದು ಸಂಜೆ 6 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆ ದಿನವಾದ ಜೂನ್ 4ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಆದೇಶಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಜಿಲ್ಲೆಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಮತದಾನ ಕೇಂದ್ರದ ಸುತ್ತ-ಮುತ್ತ ಮುಂತಾದವುಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ. ಯಾವುದೇ ಆಯುಧ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ ಎಂದು ತಿಳಿಸಿದ್ದಾರೆ.

ಮತಗಟ್ಟೆ ಸುತ್ತಮುತ್ತ ಭದ್ರತೆ:

ಮತಗಟ್ಟೆಗಳು, ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಮತದಾನ ದಿನದಂದು ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ ಹಾಗೂ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ಯಾವುದೇ ವಸ್ತುಗಳನ್ನು ಬಳಸುವ೦ತಿಲ್ಲ. ಯಾವುದೇ ರೀತಿಯ ಬಂದ್, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ, ಪ್ರದರ್ಶನ, ಪೂರಕ ಚಟುವಟಿಕೆಗಳು, ಯಾವುದೇ ಖಾಸಗಿ , ಆಸ್ತಿ ಪಾಸ್ತಿಗಳನ್ನು ಹಾನಿಗೊಳಿಸುವ ಹಾಗೂ ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿಯ ಜಾತಿ-ಧರ್ಮ, ಕೋಮು ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಬಾಧಕ ಉಂಟುಮಾಡುವ ಚಟುವಟಿಕೆ, ಸಂತೆ, ಜಾತ್ರೆ ನಿಷೇಧಿಸಿದ್ದು, ಈ ಆಜ್ಞೆಯು ಮದುವೆ, ಶುಭ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶವ ಸಂಸ್ಕಾರಕ್ಕೆ ಮತ್ತು ಚುನಾವಣಾ ಸಂಬಂಧ ಏರ್ಪಡಿಸಲಾಗಿರುವ ಮತ ಕೇಂದ್ರಕ್ಕೆ ಅನ್ವಯಿಸುವುದಿಲ್ಲ ಎಂದು ವಿವರಿಸಿದ್ದಾರೆ.

ಬಹಿರಂಗ ಪ್ರಚಾರ ಇಂದು ಕೊನೆ:

ಬಹಿರಂಗ ಪ್ರಚಾರ ಏ.24ರ ಬುಧವಾರ ಸಂಜೆ 6ಕ್ಕೆ ಕೊನೆಗೊಳ್ಳಲಿದ್ದು, ಈ ಜಿಲ್ಲೆಯ ನಾಲ್ಕು ಕ್ಷೇತ್ರದ ಮತದಾರರಲ್ಲದವರು ಆಯಾ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ವಿವಿಧೆಡೆ ವಾಸ್ತವ್ಯ ಹೂಡಿದವರ ಪಟ್ಟಿಗಳನ್ನು ಪೊಲೀಸ್‌ ಇಲಾಖೆ ಪರಿಶೀಲನೆ ಮಾಡುವುದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲೂಕುಗಳ ಮತದಾರರಲ್ಲದವರನ್ನು ಮತಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವುದು. ಚೆಕ್ ಪೋಸ್ಟ್ಗಳಲ್ಲಿ ಮತಕ್ಷೇತ್ರದ ಹೊರಗಿನಿಂದ ಬರುವ ಎಲ್ಲಾ ರೀತಿಯ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸತಕ್ಕದ್ದು ಎಂದು ತಿಳಿಸಿದರು.

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.