ಮರಳು ಅಡ್ಡೆ ಮೇಲೆ ಲೋಕಾಯುಕ್ತ ದಾಳಿ

KannadaprabhaNewsNetwork |  
Published : Jul 03, 2026, 02:30 AM IST
2ಕೆಪಿಎಲ್14:ನವಲಿ ಸಮೀಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎರಡು ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು. | Kannada Prabha

ಸಾರಾಂಶ

ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿ

ನವಲಿ: ಸಮೀಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎರಡು ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಭಾರಿ ಪ್ರಮಾಣದ ಮರಳು ಹಾಗೂ ಯಂತ್ರೋಪಕರಣ ಗುರುವಾರ ಸಂಜೆ ವಶಪಡಿಸಿಕೊಂಡಿದ್ದಾರೆ.

ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸಹ ಭಾಗವಹಿಸಿದ್ದರು.

ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳ ಸೂಚನೆಯ ಮೇರೆಗೆ ಸ್ಥಳ ಪರಿಶೀಲನೆಗೆ ತೆರಳಿದ ಅಧಿಕಾರಿಗಳು, ಅಕ್ರಮ ಮರಳು ಸಂಗ್ರಹ ಹಾಗೂ ಸಾಗಣೆ ನಡೆಯುತ್ತಿರುವುದು ಪತ್ತೆ ಹಚ್ಚಿದರು.

ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ 20 ಟಿಪ್ಪರ್‌ಗಳಷ್ಟು ಮರಳು, 4 ಹಿಟಾಚಿ ಯಂತ್ರಗಳು, 1 ಆಯಿಲ್ ಎಂಜಿನ್ ಹಾಗೂ 1 ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದು ಸೀಜ್ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನಕಗಿರಿ ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದೆ, ಸ್ಥಳೀಯವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ತಡೆಯುತ್ತಿಲ್ಲ ಎಂದು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ಸಲ್ಲಿಕೆಯಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅಕ್ರಮ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಚನ ಸಂಸ್ಕೃತಿ ಉಳಿಸಿದ ಫ.ಗು.ಹಳಕಟ್ಟಿ
ಹಿರೇಮಾದಿನಾಳ ಮೊರೇರ ಗುಡ್ಡ ಸಂಶೋಧನೆಗೆ ಹೊಸ ತಿರುವು!