ಬೆಳ್ಳಂಬೆಳಗ್ಗೆಯೇ ಶಿವಮೊಗ್ಗದಲ್ಲಿ ಲೋಕಾಯುಕ್ತ ರೈಡ್‌

KannadaprabhaNewsNetwork |  
Published : Jul 20, 2024, 12:47 AM IST
ಭದ್ರಾವತಿ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ | Kannada Prabha

ಸಾರಾಂಶ

ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ.ಪಂ. ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ / ಭದ್ರಾವತಿ

ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಶುಕ್ರವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ.ಪಂ. ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ಶಿವಮೊಗ್ಗದ ಕೃಷಿ ನಗರದಲ್ಲಿರುವ ಕೃಷಿ ಇಲಾಖೆ ಅಧಿಕಾರಿ ಪ್ರಕಾಶ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಪ್ರಕಾಶ್ ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆ ನಡೆದಿದೆ. ಲೋಕಾಯುಕ್ತ ಎಸ್.ಪಿ.ಮಂಜುನಾಥ ಚೌಧರಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯ ನಾಗೇಶ್ ನಿವಾಸದ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭೂ ಖರೀದಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಮೂಲತಃ ರೈತ ಕುಟುಂಬದ ನಾಗೇಶ್‌ರವರು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಈ ಹಿಂದೆ ೧ ಬಾರಿ ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಸಮಿತಿ ಸದಸ್ಯರಾಗಿದ್ದು, ೨ ಬಾರಿ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದಾರೆ.

ಅಂತರಗಂಗೆ ಕ್ಯಾಂಪ್‌ನಲ್ಲಿ ಬಡಾವಣೆ ನಿರ್ಮಾಣಕ್ಕೆ ಸುಮಾರು ಎರಡೂವರೆ ಎಕರೆ ಜಮೀನು ಖರೀದಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕುದಾರರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು ಎಂಬ ಮಾಹಿತಿ ಹರಿದಾಡುತ್ತಿದ್ದವು. ಈ ನಡುವೆ ಇದೀಗ ಲೋಕಾಯುಕ್ತ ದಾಳಿ ನಡೆದಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ನಾಗೇಶ್‌ರವರ ವಂಶಸ್ಥರು ಜಮೀನ್ದಾರ್ ಹಿನ್ನೆಲೆಯಲ್ಲಿ ಹೊಂದಿದ್ದು, ನಾಗೇಶ್ ಮತ್ತು ಇವರ ಸಹೋದರ ಜಂಟಿಯಾಗಿ ಪ್ರಿತಾರ್ಜಿತ ಆಸ್ತಿ ಹೊಂದಿದ್ದಾರೆ. ಅಲ್ಲದೆ ನಾಗೇಶ್‌ರವರು ಅಡಕೆ ಮಾರಾಟ ಸೇರಿದಂತೆ ಇನ್ನಿತರ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿವೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ