ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬಾಗಲಕೋಟೆ ಜಿಲ್ಲೆಯ ವಿವಿಧ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಶೋಧನೆ ಹಾಗೂ ಪರಿಶೀಲನಾ ಕಾರ್ಯ ಕೈಗೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಭ್ರಷ್ಟಾಚಾರ, ದುರಾಡಳಿತ, ಮಧ್ಯವರ್ತಿಗಳ ಹಾವಳಿ ಹಾಗೂ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಬಂದ ದೂರುಗಳು ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬಾಗಲಕೋಟೆ ಜಿಲ್ಲೆಯ ವಿವಿಧ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಶೋಧನೆ ಹಾಗೂ ಪರಿಶೀಲನಾ ಕಾರ್ಯ ಕೈಗೊಂಡಿದ್ದಾರೆ.
ಲೋಕಾಯುಕ್ತರ ನಿರ್ದೇಶನದಂತೆ ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಜಿಲ್ಲೆಯ ಎಂಟು ಉಪನೋಂದಣಾಧಿಕಾರಿ ಕಚೇರಿಗಳ ಕಾರ್ಯನಿರ್ವಹಣೆ ಪರಿಶೀಲಿಸುತ್ತಿದ್ದಾರೆ. ಬಾದಾಮಿ, ಹುನಗುಂದ, ಮುಧೋಳ, ಬೀಳಗಿ, ತೇರದಾಳ, ಇಳಕಲ್, ಗುಳೇದಗುಡ್ಡ ಹಾಗೂ ಕೆರೂರ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ಶೋಧನೆ ಮತ್ತು ಪರಿಶೀಲನಾ ಕಾರ್ಯ ನಡೆಯುತ್ತಿದೆ.
ಈ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುತ್ತಿರುವುದು, ಮಧ್ಯವರ್ತಿಗಳ ಹಾವಳಿ ಹೆಚ್ಚಿರುವುದು, ನಿಗದಿತ ನೋಂದಣಿ ಶುಲ್ಕ ಹಾಗೂ ಮುದ್ರಾಂಕ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ಸಾರ್ವಜನಿಕರಿಂದ ಪಡೆಯುತ್ತಿರುವುದು ಸೇರಿದಂತೆ ಹಲವು ಅಕ್ರಮಗಳ ಕುರಿತು ದೂರುಗಳು ಬಂದಿದ್ದವು.
ಈ ಹಿನ್ನೆಲೆ ಬಾಗಲಕೋಟೆ, ಧಾರವಾಡ, ಗದಗ ಹಾಗೂ ವಿಜಯನಗರ ಜಿಲ್ಲೆಗಳ ಲೋಕಾಯುಕ್ತ ಘಟಕಗಳ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಒಟ್ಟು ಡಿಎಸ್ಪಿ-01, ಪೊಲೀಸ್ ನಿರೀಕ್ಷಕರು-7 ಹಾಗೂ ಸಿಬ್ಬಂದಿ 24 ಮಂದಿ ಸೇರಿ 32 ಅಧಿಕಾರಿ-ಸಿಬ್ಬಂದಿ ಶೋಧನಾ ಕಾರ್ಯದಲ್ಲಿ ತೊಡಗಿದ್ದಾರೆ.
ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ದಾಖಲೆಗಳು, ಶುಲ್ಕ ವಸೂಲಿ ಹಾಗೂ ಕಚೇರಿ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪರಿಶೀಲಿಸಲಾಗುತ್ತಿದ್ದು, ಶೋಧನೆ ಕಾರ್ಯ ಮುಂದುವರೆದಿದೆ. ಶೋಧನೆ ಪೂರ್ಣಗೊಂಡ ಬಳಿಕ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನಾ ವರದಿ ಹಾಗೂ ಮುಂದಿನ ಕ್ರಮದ ಕುರಿತು ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ.ನಂದಗಾಂವಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.