ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಹಲವೆಡೆ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ವರ್ತಕರು ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಿದರು. ವ್ಯಾಪಾರ ವಹಿವಾಟು ಬೆಳಗ್ಗೆಯಿಂದ ಸಂಜೆವರೆಗೂ ಸಂಪೂರ್ಣ ಸ್ಥಗಿತಗೊಂಡಿತ್ತು.
ಸರ್ಕಾರಿ ಕಚೇರಿಗಳು, ಬ್ಯಾಂಕ್, ಆಸ್ಪತ್ರೆ, ಶಾಲಾ ಕಾಲೇಜುಗಳು, ಚಿತ್ರ ಮಂದಿರಗಳು, ಮೆಡಿಕಲ್ ಶಾಪ್ ಹಾಗೂ ಅಗತ್ಯ ವಸ್ತುಗಳ ಮಾರಾಟ ಎಂದಿನಂತೆ ಕಾರ್ಯ ನಿರ್ವಹಿಸಿದವು. ಸಾರಿಗೆ ಮತ್ತು ಖಾಸಗಿ ಬಸ್ ಸಂಚಾರ ಮಾಮೂಲಿಯಾಗಿತ್ತು. ಎಪಿಎಂಸಿ ಎಳನೀರು ಮಾರುಕಟ್ಟೆಯಲ್ಲಿ ಎಂದಿನಂತೆ ವಹಿವಾಟು ನಡೆಯಿತು.ಬಂದ್ ಹಿನ್ನೆಲೆಯಲ್ಲಿ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಶಿವಕುಮಾರ್, ಪಿಎಸ್ಐಗಳಾದ ಮಂಜುನಾಥ್, ಭೀಮಪ್ಪ ಬಾಣಸಿ, ಪ್ರಕಾಶ್, ಮೋಹನ್ ರೆಡ್ಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ಜರುಗದೆ ಬಂದ್ ಶಾಂತಿಯುತವಾಗಿತ್ತು.
ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಧರ್ಮ ನಿಂದನೆ, ಅಪಪ್ರಚಾರ ಖಂಡಿಸಿ ಭಕ್ತರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ನಂತರ ಕಚೇರಿ ಎದುರಿನ ಬೆಂಗಳೂರು- ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಸಂಘಟನೆಗಳ ಕಾರ್ಯಕರ್ತರು ಮತ್ತು ಭಕ್ತರು, ಧರಣಿ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರವನ್ನು ತೀವ್ರವಾಗಿ ಖಂಡಿಸಿದರು.
ಈ ವೇಳೆ ಮಾತನಾಡಿದ ಜೈನ ಮಠದ ಪೀಠಾಧ್ಯಕ್ಷ ಸಿದ್ಧಾಂತ ಕೀರ್ತಿ ಭಟ್ಟಾಚಾರ್ಯ ಅವರು, ಭಾರತೀಯ ಸಂಸ್ಕೃತಿಯಲ್ಲಿ ಧರ್ಮ ಕ್ಷೇತ್ರಗಳಿಗೆ ಅಪಾರ ಗೌರವ ಸ್ಥಾನಮಾನಗಳಿವೆ. ಧರ್ಮಸ್ಥಳದಂತಹ ಶ್ರದ್ಧಾ ಕೇಂದ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಇಡೀ ಭಾರತೀಯ ಹಿಂದೂಗಳು ತಲೆತಗ್ಗಿಸುವ ವಿಚಾರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
----------
ಮದ್ದೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಮದ್ದೂರು ಬಂದ್ ಮತ್ತು ಪ್ರತಿಭಟನೆಗೆ ಬೆಂಬಲಿಸಿ ಪಟ್ಟಣದ ವಕೀಲರು ಶುಕ್ರವಾರ ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು. ಹಿರಿಯ ವಕೀಲ ಟಿ.ನಾಗರಾಜು ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ವಕೀಲರು, ಧರ್ಮಸ್ಥಳದ ವಿರುದ್ಧದ ಅಪಪ್ರಚಾರವನ್ನು ತೀವ್ರವಾಗಿ ಖಂಡಿಸಿದರು. ಉದ್ದೇಶ ಪೂರ್ವಕವಾಗಿ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿರುವ ವ್ಯಕ್ತಿಗಳನ್ನು ಕಾನೂನು ಚೌಕಟ್ಟಿನಲ್ಲಿ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ವಕೀಲರು ಸಾಮೂಹಿಕವಾಗಿ ಆಗ್ರಹಪಡಿಸಿದರು.
ಪ್ರತಿಭಟನೆಯಲ್ಲಿ ಹಿರಿಯ ವಕೀಲ ಎಚ್.ಮಾದೇಗೌಡ, ಎಂ.ಎಂ.ಪ್ರಶಾಂತ್, ಎಂ.ಎನ್.ಚಂದ್ರಶೇಖರ್, ಉಮೇಶ್, ಎಂ.ಸಿ.ಮಹೇಶ್, ಶಿವಲಿಂಗಯ್ಯ, ಎಂ.ಮಹೇಶ ಮತ್ತಿತರರು ಪಾಲ್ಗೊಂಡಿದ್ದರು.