ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.
ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ ₹2.65 ಕೋಟಿ ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7.30ರ ವರೆಗೂ ನಡೆಯಿತು. ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ₹2,65,04,712 ನಗದು 58 ಗ್ರಾಂ ಚಿನ್ನ ಹಾಗೂ 2,070 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಇದಲ್ಲದೆ ಇ-ಹುಂಡಿಯಿಂದ ₹6,66,104 ವಿದೇಶಿ 15 ನೋಟುಗಳು ಹಾಗೂ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 36 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ.
ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ಮಹದೇವ್, ಪ್ರಾಧಿಕಾರದ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಬಸವಣ್ಣ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕರು, ಪೊಲೀಸ್ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.