ಕನ್ನಡಪ್ರಭ ವಾರ್ತೆ ಬಳ್ಳಾರಿ
ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಶಾಸಕರು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ನಗರ ಶಾಸಕ ನಾರಾ ಭರತ್ ರೆಡ್ಡಿ ಕಚೇರಿ ಮುಂಭಾಗ ಭಾನುವಾರ ತಮಟೆ ಚಳವಳಿ ನಡೆಸಲಾಯಿತು.ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಜಾರಿಯಾಗಬೇಕಿರುವ ಒಳಮೀಸಲಾತಿಯ ಬೇಡಿಕೆ ಕಳೆದ ಮೂರುವರೆ ದಶಕಗಳಿಂದ ನನೆಗುದಿಗೆ ಬಿದ್ದಿದೆ. ಈವರೆಗೆ ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಒಳ ಮೀಸಲಾತಿ ನೀಡುವಲ್ಲಿ ವಿಫಲವಾಗಿವೆ. ಬರೀ ಭರವಸೆಗಳನ್ನು ನೀಡಿ ಸಮಾಧಾನ ಪಡಿಸುತ್ತಿರುವ ರಾಜಕೀಯ ಪಕ್ಷಗಳು ಪರಿಶಿಷ್ಟರ ಕಾಳಜಿಯನ್ನು ಮರೆತಿದ್ದು ರಾಜ್ಯ ಸರ್ಕಾರ ಒಳ ಮೀಸಲಿಗೆ ಕ್ರಮ ಜರುಗಿಸಬೇಕು ಎಂದು ಜಿಲ್ಲೆಯ ಶಾಸಕರು ಹಾಗೂ ಸಂಸದರು ಸದನದಲ್ಲಿ ಧ್ವನಿ ಎತ್ತಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದೇ ವೇಳೆ ಮಾತನಾಡಿದ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಎಚ್.ಹನುಮಂತಪ್ಪ, ಸಾಮಾಜಿಕ ಅಸಮಾನತೆಯನ್ನು ಸರಿಪಡಿಸಲು 2024ರ ಆ.1ರಂದು ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶವನ್ನು ನೀಡಿದೆ. ಆದರೆ, ಕರ್ನಾಟಕ ಸರ್ಕಾರವು ಈ ಸರ್ವೋಚ್ಛ ನ್ಯಾಯಾಲಯದ ತೀರ್ಪುನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದೆ ಎಂದು ಆಪಾದಿಸಿದರು.ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಹರಿಯಾಣ , ತೆಲಂಗಾಣ , ಆಂಧ್ರಪ್ರದೇಶ ಸರ್ಕಾರಗಳು ತುರ್ತು ನಿಗಾ ವಹಿಸಿ ತಮ್ಮ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿ ಆಗಿದ್ದಾರೆ. ಆದರೆ ಕರ್ನಾಟಕ ಸರ್ಕಾರ ತೀವ್ರವಾದ ವಿಳಂಬ ನೀತಿ ಅನುಸರಿಸುತ್ತಿದ್ದು ಪರಿಶಿಷ್ಟ ಜಾತಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಾದಿಗ ಮತ್ತು 29 ಉಪಜಾತಿಗಳಲ್ಲಿ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ ಎಂದರು.
ಒಕ್ಕೂಟದ ಜಿಲ್ಲಾ ಪ್ರಮುಖರಾದ ರಾಜೇಶ್, ಬೆಳಗಲ್ಲು ಹುಲುಗಪ್ಪ, ಪ್ರಸಾದ್, ಅರುಣಾಚಲಂ, ಎ.ಈಶ್ವರಪ್ಪ, ಸಿ.ಸೋಮಶೇಖರ್, ದುರಗಪ್ಪ ತಳವಾರ್, ನೆಟ್ಟೆಪ್ಪ, ನರಸಪ್ಪ, ಶಿವಶಂಕರ್, ಷಣ್ಮುಖಪ್ಪ, ಪಂಪಾಪತಿ ಸೇರಿದಂತೆ ಒಕ್ಕೂಟದ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ತಮಟೆ ಚಳವಳಿ ಮುನ್ನ ಭಾನುವಾರ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಎಚ್.ಹನುಮಂತಪ್ಪ, ಆ. 19ರಂದು ಅಂತಿಮ ನಿರ್ಧಾರ ಪ್ರಕಟಿಸಿ ಒಳ ಮೀಸಲಾತಿ ಘೋಷಿಸಬೇಕು. ಸಂಪುಟ ಸಭೆಯಲ್ಲಿ ಮತ್ತೊಂದು ಸಮಿತಿ ರಚನೆಗೆ ಮುಂದಾದರೆ ಸರ್ಕಾರ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಿ.ಇ. ರಾಜೇಶ್, ಎಂ.ನರಸಪ್ಪ, ಅರುಣಾಚಲಂ, ಯರಗುಡಿ ಶಂಕರ್, ಜನಾರ್ದನ, ವಿಶ್ವನಾಥಶರ್ಮ, ಷಣ್ಮುಖಪ್ಪ, ಹೊನ್ನೂರಪ್ಪ ಸುದ್ದಿಗೋಷ್ಠಿಯಲ್ಲಿದ್ದರು.