ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ 29 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಅಮೃತ ಮಹೋತ್ಸವದ ಸ್ಮರಣಾರ್ಥ ಬಿಲ್‌ಬೋರ್ಡ್ ಅಳವಡಿಸಲಾಗಿದೆ. ಕೊಡಗಿನ ಎಲ್ಲಾ ಶಾಲಾ ಕಾಲೇಜುಗಳ ಎನ್‌ಸಿಸಿ ಕೆಡೆಟ್‌ಗಳಿಗೆ ಅನುಕೂಲವಾಗುವಂತೆ ಕಾಲೇಜಿನ ಮೈದಾನದ ಪಾರ್ಶ್ವಭಾಗದಲ್ಲಿ 9 ಅಡಿ ಎತ್ತರದ ರೈಫಲ್ ರೇಂಜ್ ನಿರ್ಮಿಸಲಾಗಿದೆ. ಕಾಲೇಜಿನ ಎನ್‌ಸಿಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಿ 65 ಯೂನಿಟ್ ರಕ್ತ ಸಂಗ್ರಹಿಸಲಾಗಿದೆ.
ಅರ್ಥಶಾಸ್ತ್ರ ವಿಭಾಗದ ಎ.ಡಿ.ಶ್ರಫ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಲು ಹಾಗೂ ಆಂಗ್ಲ ಭಾಷಾ ವಿಭಾಗದ ಒಂದು ದಿನದ ವಿಚಾರ ಸಂಕಿರಣಕ್ಕೆ ಧನಸಹಾಯ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಕಾರ್ಯಾಗಾರ, ಗ್ರಂಥಾಲಯಕ್ಕೆ ಡಿಜಿಟಲ್ ಲೈಬ್ರರಿ ಅಳವಡಿಸಲು ಸಹಾಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಆರ್ಥಿಕ ನೆರವು ನೀಡಲಾಗಿದೆ. ಸಂಘದ ವತಿಯಿಂದ ಕಾಲೇಜಿನ ಮೈದಾನವನ್ನು ವರ್ಷಕ್ಕೆ ಎರಡು ಬಾರಿ ಸ್ವಚ್ಛಗೊಳಿಸಲಾಗುತ್ತಿದೆ. ಸೆಮಿನಾರ್ ಹಾಲ್‌ನಲ್ಲಿ ದುರಸ್ತಿಗೊಂಡ ಮೈಕ್ ತೆರವುಗೊಳಿಸಿ ಹೊಸ ಮೈಕ್ ಅಳವಡಿಸಲಾಗಿದೆ.ಕಾಲೇಜು ಆವರಣದಲ್ಲಿ 50ಕ್ಕೂ ಹೆಚ್ಚು ಹಣ್ಣಿನ ಗಿಡಗಳನ್ನು ನೆಡಲಾಗಿದೆ. ಪ್ರತಿಭಾ ಸಮಾಗಮ ಕಾರ್ಯಕ್ರಮಕ್ಕೆ ಧನಸಹಾಯ ನೀಡಲಾಗಿದ್ದು, ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗಾಗಿ ಮಾಹಿತಿ ಕಾರ್ಯಾಗಾರ, ರಸಪ್ರಶ್ನೆ ಸ್ಪರ್ಧೆ ಹಾಗೂ ಜಿಲ್ಲಾ ಮಟ್ಟದ ಛಾಯಾಗ್ರಹಣ ಸ್ಪರ್ಧೆ ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಪತ್ರಿಕಾ ಕಚೇರಿ, ಟಿವಿ ಮಾಧ್ಯಮ ಹಾಗೂ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯ ಕಾರ್ಯನಿರ್ವಹಣೆ ಕುರಿತು ಪ್ರಾಯೋಗಿಕ ಮಾಹಿತಿ ನೀಡಲಾಗಿದೆ.
ಮುಕ್ಕಾಟಿರ ಎ.ಅಪ್ಪಯ್ಯ, ರಾಷ್ಟçಪತಿ ಪ್ರಶಸ್ತಿ ವಿಜೇತ ಶಶಿ ಕಿರಣ್ ಕೆ.ಎ. ಹಾಗೂ ಸಮಾಜ ಸೇವಕ ವಿ.ಜಿ.ಮೋಹನ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಗುವುದು. ಮಹಾಸಭೆಯ ಆಹ್ವಾನ ಪತ್ರಿಕೆ ಸಿಗದವರು ಕೂಡ ಸಭೆಯಲ್ಲಿ ಪಾಲ್ಗೊಂಡು ಸಹಕರಿಸಬೇಕು ಎಂದರು.ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 53 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುತ್ತಿದೆ. ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ.
ಫೀ.ಮಾ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಮಾತನಾಡಿ ಕಾಲೇಜ್ ನ ಪ್ರಗತಿಗೆ ಹಳೆ ವಿದ್ಯಾರ್ಥಿ ಸಂಘ ಅಪಾರ ಸಹಕಾರವನ್ನು ನೀಡುತ್ತಿದೆ ಎಂದರು.
ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಉಪಾಧ್ಯಕ್ಷ ಬೊಟ್ಟಂಗಡ ಗಣಪತಿ ಹಾಗೂ ನಿರ್ದೇಶಕಿ ಖುರ್ಷಿದ್ ಬಾನು ಕೆ.ಹೆಚ್. ಮಾತನಾಡಿದರು.