ಮಡಿಕೇರಿ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಶಿವಶಂಕರ್ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಅತಿ ಕಡಿಮೆ ಗೌರವಧನ ಪಡೆದು ಹೆಚ್ಚಿನ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸರ್ಕಾರಿ ನೌಕರರೆಂದೇ ಪರಿಗಣಿಸಲು ಮತ್ತು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದೊಂದಿಗೆ ಸಮಾಲೋಚನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಶಿವಶಂಕರ್ ಭರವಸೆ ನೀಡಿದ್ದಾರೆ.
ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಡಿಮೆ ಗೌರವಧನ ಪಡೆದು ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಇವರನ್ನು ಕೂಡ ಸರ್ಕಾರಿ ಉದ್ಯೋಗಿಗಳೆಂದು ಪರಿಗಣಿಸುವ ಅಗತ್ಯವಿದೆ. ನಿವೃತ್ತಿ ವೇತನ ಮತ್ತು ಆರೋಗ್ಯ ವಿಮೆ ಯೋಜನೆಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದ ಗಮನ ಸೆಳೆಯಲಾಗಿದೆ. ಸರ್ಕಾರಿ ನೌಕರರನ್ನಾಗಿ ನೇಮಕ ಮಾಡಿಕೊಳ್ಳುವ ಬೇಡಿಕೆ ಕುರಿತು ರಾಜ್ಯ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು.
ಮೂಡ ಮಾಜಿ ಅಧ್ಯಕ್ಷ ಸುರಯ್ಯ ಅಬ್ರಾರ್ ಮಾತನಾಡಿ, ಮಹಿಳೆಯರ ಒಗ್ಗಟ್ಟಿನಲ್ಲಿ ಬಲವಿದೆ, ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಂಘಟಿತರಾಗಬೇಕು ಎಂದರು.
ಸಮಾಜ ಸೇವಕ ರವೂಫ್ ಎಂ.ಎನ್. ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೊಡಗು ಜಿಲ್ಲೆಯ ಇಬ್ಬರು ಶಾಸಕರ ಗಮನಕ್ಕೆ ತಂದು ಪರಿಹಾರಕ್ಕೆ ಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಸಿ.ಯು.ಪವಿತ್ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಮತ್ತು ನಿವೃತ್ತರನ್ನು ಗೌರವಿಸಲಾಯಿತು.
ಸೋಮವಾರಪೇಟೆ ತಾಲೂಕು ಸಂಘದ ಅಧ್ಯಕ್ಷೆ ಧನಲಕ್ಷ್ಮಿ ಕಾರ್ಯದರ್ಶಿ ತಾರಾ, ಮಾಜಿ ಜಿಲ್ಲಾಧ್ಯಕ್ಷೆ ತಾರಾಮಣಿ, ತಾಲೂಕು ಮಾಜಿ ಅಧ್ಯಕ್ಷೆ ಅಕ್ಕಮ್ಮ, ಸಂಘಟನೆಯ ಪದಾಧಿಕಾರಿಗಳು, ಮಡಿಕೇರಿ ತಾಲೂಕು 5 ವರ್ತುಲದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇದ್ದರು.
ಕ್ಷೇಮನಿಧಿ ವರದಿಯನ್ನು ಕ್ಷೇಮನಿಧಿ ಕಾರ್ಯದರ್ಶಿ ಮೇನಕೆ ಮಂಡಿಸಿದರು. ಉಷಾ ಪ್ರಾರ್ಥಿಸಿ, ಕಾರ್ಯದರ್ಶಿ ಆಶಾಲತಾ ಸ್ವಾಗತಿಸಿ, ಸುಮತಿ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.