ಮಡ್ನಾಳ್‌: ಅಪಘಾತದಲ್ಲಿ ಮೂವರು ಮಹಿಳೆಯರ ಸಾವು

KannadaprabhaNewsNetwork |  
Published : Aug 24, 2026, 01:15 AM IST
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ ವಾಹನ.  | Kannada Prabha

ಸಾರಾಂಶ

ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಭಾನುವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಯಾದಗಿರಿ

ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಭಾನುವಾರ ನಡೆದಿದೆ.

ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ. ಉಳಿದ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಡ್ನಾಳ್ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ಬೆಳಗಿನ ಜಾವ ತೆರಳಿದ್ದ ಕಾರ್ಮಿಕರು ಕೆಲಸ ಮುಗಿಸಿಕೊಂಡು ಬೊಲೆರೋ ವಾಹನದಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ವಾಹನದಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಗಾಯಾಳುಗಳನ್ನು ವಾಹನದಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾದರು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಘಟನಾ ಸ್ಥಳಕ್ಕೆ ಭೀಮರಾಯನ ಗುಡಿ ಪೊಲೀಸ್ ಠಾಣೆಯ ಪಿಎಸ್ಐ ದೇವಿಂದ್ರರೆಡ್ಡಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ಬವಸರಾಜಪ್ಪ ವಿಭೂತಿಹಳ್ಳಿ ಹಾಗೂ ಮುಖಂಡ ಅಮೀನರೆಡ್ಡಿ ಯಾಳಗಿ ಮುಂತಾದವರು ಶಹಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಬುರಗಿಯಲ್ಲಿ ಉದ್ಯಮಿ ಪಾಟೀಲ್‌ ಪುಣ್ಯಸ್ಮರಣೆ
224 ಕ್ಷೇತ್ರಗಳ ಅಂತರ್ಜಲ ಹೆಚ್ಚಳಕ್ಕೆ ಯೋಜನೆ: ಡಾ.ಅಜಯ್‌ ಧರಂಸಿಂಗ್‌