ಉಡುಪಿ: ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪಠ್ಯಕ್ರಮದ ಶಿಕ್ಷಣತೆಗೆ ಸೀಮಿತವಾಗಿರದೇ ಪರಿಪೂರ್ಣತೆಯ ಶಿಕ್ಷಣದ ಅಗತ್ಯವಿದೆ. ಅಂತಹ ಶಿಕ್ಷಣವೇ ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಅಡಿಪಾಯವಾಗುತ್ತದೆ. ತಮ್ಮ ಪ್ರತಿಭೆಗೆ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಅದರಿಂದ ಪ್ರೇರಣೆ ಪಡೆದು ಉತ್ತಮ ವ್ಯಕ್ತಿಯಾಗಿ ದೇಶಕ್ಕೆ ಆಸ್ತಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.
ಸಮಾರಂಭ ಉದ್ಘಾಟಿಸಿದ ನಾಡೋಜ ಡಾ. ಜಿ. ಶಂಕರ್ ಅವರು, ಮಹಾಲಕ್ಷ್ಮೀ ಬ್ಯಾಂಕ್ ಯಶ್‌ಪಾಲ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಿರಂತರ ಪ್ರಗತಿ ಸಾಧಿಸುತಿದ್ದು, ಲಾಭಾಂಶದ ಬಹುದೊಡ್ಡ ಮೊತ್ತವನ್ನು ಶಿಕ್ಷಣಕ್ಕೆ ಪ್ರೋತ್ಸಾಹ, ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿ ಮಾದರಿ ಸಹಕಾರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಮಹಾನಗರಿ ಮುಂಬೈನಲ್ಲಿಯೂ ವ್ಯವಹಾರ ವಿಸ್ತರಿಸಲು ಮುಂದಾಗಿರುವುದು ಅಭಿನಂದನಾರ್ಹ ಎಂದರು.
ಬ್ಯಾಂಕಿನ ಅಧ್ಯಕ್ಷ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.ಗೀತಾನಂದ ಫೌಂಡೇಶನ್ ಅಧ್ಯಕ್ಷ ಆನಂದ ಸಿ. ಕುಂದರ್ ಬ್ಯಾಂಕಿನ ಡೈರಿ ಬಿಡುಗಡೆ ಮಾಡಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಶುಭ ಹಾರೈಸಿದರು.
ಉಚ್ಚಿಲ ದಸರಾ ಮಹೋತ್ಸವದಂಗವಾಗಿ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.
ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವ ಮಹಾಲಕ್ಷ್ಮೀ ಬ್ಯಾಂಕ್ ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿದೆ, ಈ ಬಾರಿಯೂ 50 ಲಕ್ಷ ರು.ಗಳನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಸಾಧನೆಯ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವಂತಾಗಲಿ ಎಂಬುದೇ ನಮ್ಮ ಆಶಯವಾಗಿದೆ. -ಯಶ್‌ಪಾಲ್ ಸುವರ್ಣ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರು.