ಬಳ್ಳಾರಿ: ಜಗತ್ತು ಕಂಡ ಮಹಾ ಶಾಂತಿಧೂತ ಹಾಗೂ ಅಹಿಂಸಾವಾದಿ ಮಹಾತ್ಮ ಗಾಂಧೀಜಿ ಅವರ ಜೀವನ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಈ.ತುಕಾರಾಂ ಹೇಳಿದರು.
ಅವಳಿ ಜಿಲ್ಲೆಗಳ ಅಭಿವೃದ್ಧಿಗೆ ಬದ್ಧ:
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ಯೋಜನಾ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಹಂತ-ಹಂತವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದರು.ಈಗಾಗಲೇ ಬಳ್ಳಾರಿ ನಗರದ ವಿವಿಧ ರೈಲ್ವೇ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರದಿಂದ ಅನುಮತಿ ಪಡೆದುಕೊಳ್ಳಲಾಗಿದೆ. ಸುಧಾಕ್ರಾಸ್‌ನ ಮೇಲ್ಸೇತುವೆ ಕಾಮಗಾರಿ ಮತ್ತು ಎಚ್.ಆರ್. ಗವಿಯಪ್ಪ ವೃತ್ತದ ಮೇಲ್ಸೇತುವೆ ವಿಸ್ತರಣಾ ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. ಒಟ್ಟಾರೆ ಅವಳಿ ಜಿಲ್ಲೆಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಮಾದರಿ ಜಿಲ್ಲೆಗಳನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ತಾಲೂಕುಗಳಿಂದ ಒಟ್ಟು 59 ಗ್ರಾಮಗಳನ್ನು ಆಯ್ಕೆಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.ಈ ಭಾಗದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ತುರ್ತು ಚಿಕಿತ್ಸೆಗಾಗಿ ಹೊಸಪೇಟೆ ನಗರದಲ್ಲಿ 50 ಹಾಸಿಗೆಯುಳ್ಳ ಆಸ್ಪತ್ರೆಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.
ದೇಶದ ಪ್ರಗತಿಯೆಡೆಗೆ ಮುನ್ನಡೆಸಿದ ದೂರದೃಷ್ಠಿಯುಳ್ಳ ಲಾಲ್ ಬಹಾದ್ದೂರ್ ಶಾಸ್ತ್ರಿ ಕೂಡ ಮಹಾತ್ಮಾ ಗಾಂಧಿ ಅವರ ರಾಜಕೀಯ ಚಿಂತನೆಗಳಿಂದ ಅತ್ಯಂತ ಪ್ರಭಾವಿತರಾಗಿದ್ದರು ಎಂದರು.ಮಹನೀಯರ ದಾರ್ಶನಿಕ ಬದುಕಿನ ಜೀವನ ಚಿತ್ರಣವನ್ನು ಶಾಲಾ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲು ವಿಶೇಷ ಕೈಪಿಡಿ ರಚಿಸಿ, ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿತರಿಸಬೇಕು. ಇದಕ್ಕೆ ಸಿಎಸ್‌ಆರ್ ನಡಿ ವಿಶೇಷ ಅನುದಾನ ಕಲ್ಪಿಸಲಾಗುವುದು ಎಂದು ಸಂಶದರು ತಿಳಿಸಿದರು.
ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ದೊರಕಿಸಿಕೊಟ್ಟವರು. ಜಗತ್ತಿನ ಇತರೆ ರಾಷ್ಟ್ರಗಳು ಅಹಿಂಸಾ ಮಾರ್ಗದ ಪ್ರಾಮುಖ್ಯತೆ ತಿಳಿದುಕೊಳ್ಳಬೇಕಿದೆ ಎಂದು ಹೇಳಿದರು.ಮಹಾತ್ಮ ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ ಸೇರಿದಂತೆ ಮಹನೀಯರು ಹಾಕಿಕೊಟ್ಟ ಉತ್ತಮ ಹಾದಿಯಲ್ಲಿ ಪ್ರತಿಯೊಬ್ಬರೂ ಸಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡಿದರು.ಇಬ್ರಾಹಿಂಪುರದ ಎಸ್.ಎಂ.ಹುಲುಗಪ್ಪ ಮತ್ತು ತಂಡದವರು ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ಗಾಂಧೀಜಿ ಕುರಿತು ಭಜನಾ ಗೀತೆಗಳನ್ನು ಪ್ರಸ್ತುತ ಪಡಿಸಿದರು.
ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಜಿ.ಪಂ.ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಡಿಸಿ ಮಹಮ್ಮದ್ ಝುಬೇರ್, ಉಪವಿಭಾಗಾಧಿಕಾರಿ ಡಿ.ಪ್ರಮೋದ್, ತಹಶೀಲ್ದಾರ ಗುರುರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಇಲಾಖೆಯ ವಿ.ಸಿ. ಗುರುರಾಜ್ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.