ಕನ್ನಡಪ್ರಭ ವಾರ್ತೆ ಕಲಬುರಗಿ
ನದಿಗಳಿಗೆ ನೀರು ಹರಿಸೋ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರು ಮಹಾ ಸಿಎಂ ಶಿಂಧೆಗೆ ಪತ್ರ ಬರೆದಿದ್ದಾರೆಂದು ಹೇಳುವ ಮೂಲಕ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು ಈಗಿರುವ ಪ್ರಮಾಣದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಆಗುವುದಿಲ್ಲ. ಹಾಗಾಗಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಹರಿಸುವಂತೆ ಸಿಎಂ ಮಾ.7ರಂದು ಬರೆದ ಪತ್ರದಲ್ಲಿ ತಿಳಿಸಿದ್ದರೂ ಈ ಪತ್ರಕ್ಕೆ ಸ್ಪಂದನೆಯೇ ಸಿಕ್ಕಿಲ್ಲವಂದು ವಿಷಾದಿಸಿದ್ದಾರೆ.ಸಿಎಂ ಬರೆದ ಪತ್ರಕ್ಕೆ ಸ್ಪಂದನೆ ಸಿಗದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಹಾರಾಷ್ಟ್ರದ ಅಧಿಕಾರಿಗಳ ಮೇಲೆ ನಿರಂತರ ಒತ್ತಡ ತರಲಾಗುತ್ತಿದೆ. ಕಲಬುರಗಿ ಜಿಲ್ಲೆ ಹಾಗೂ ಈಗ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಫಜಲಪುರ ತಾಲೂಕಿನಲ್ಲಿನ ಸಮಸ್ಯೆ ಬಗೆಹರಿಸಲು ಭೀಮಾ ನದಿಗೆ ನೀರು ಹರಿಸಲು ಪ್ರಯತ್ನ ನಡೆದಿದೆ ಎಂದಿದ್ದಾರೆ.
ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ಆದಷ್ಟು ಬೇಗ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದಿದ್ದಾರೆ.
ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ತಯಾರಿಸಿ ತುರ್ತು ಕ್ರಮವಹಿಸಿ ಕುಡಿಯುವ ನೀರು ಒದಗಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಖರ್ಗೆ ಹೇಳಿದ್ದಾರೆ.