ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿ ಅಂಗವಾಗಿ ಅಕ್ಟೋಬರ್ 28 ರಂದು ಬೆಳಗ್ಗೆ 10ಕ್ಕೆ ಐತಿಹಾಸಿಕ ಕೋಟೆ ಮುಂಭಾಗದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗಿ ಆನೆಬಾಗಿಲು ಮೂಲಕ, ಗಾಂಧಿವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಲಿದೆ. ಮಧ್ಯಾಹ್ನ 12 ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆಯಲ್ಲಿ ಡೊಳ್ಳು, ವೀರಗಾಸೆ, ಖಾಸಬೇಡರ ಪಡೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದ್ದಾರೆ. ಮುಖ್ಯವಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದಾಗ ಮಾತ್ರ ಜಯಂತಿ ಆಚರಣೆಗಳಿಗೆ ಮೆರುಗು ಬರಲಿದೆ, ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಎಲ್ಲ ಸಮಾಜದವರು ಪಾಲ್ಗೊಳ್ಳಬೇಕು ಎಂದರು. ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಜಯಂತಿಗೆ ಆಹ್ವಾನಿಸಲಾಗುವುದು. ಉತ್ತಮ ವಾಗ್ಮಿಗಳಿಂದ ಉಪನ್ಯಾಸ ಹಾಗೂ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗುವುದು. ಸಮುದಾಯದಲ್ಲಿ ಸಾಧನೆ ತೋರಿದ ಸಾಧಕರಿಗೆ ಸನ್ಮಾನಿಸಲಾಗುವುದು. ನಗರಸಭೆ ವತಿಯಿಂದ ತರಾಸು ರಂಗಮಂದಿರದ ಸ್ವಚ್ಛತಾ ಕಾರ್ಯ ಹಾಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು. ತೋಟಗಾರಿಕೆ ಇಲಾಖೆ ವತಿಯಿಂದ ವೇದಿಕೆ ಕಾರ್ಯಕ್ರಮದ ಸ್ಥಳದಲ್ಲಿ ಹೂವಿನ ಕುಂಡಗಳನ್ನು ನೀಡಬೇಕು ಎಂದರು. ಮಹರ್ಷಿ ವಾಲ್ಮೀಕಿ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲರನ್ನೂ ಒಳಗೊಳ್ಳಬೇಕು. ಜಯಂತಿ ಯಶಸ್ವಿಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ವಸತಿ ನಿಲಯ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ, ಉಪನ್ಯಾಸ ಮಾಲಿಕೆ ಕಾರ್ಯಕ್ರಮ ಹಮ್ಮಿಕೊಂಡು ವಾಲ್ಮೀಕಿ ಕುರಿತು ಅರಿವು ಮೂಡಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಚಿತ್ರದುರ್ಗ ನಗರದ ಜೆಸಿಆರ್ 4ನೇ ಕ್ರಾಸ್ ಹತ್ತಿರ ಇರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ನಗರದ ಬಿಡಿ ರಸ್ತೆಯ ಪ್ರವಾಸಿ ಮಂದಿರದ ಸಮೀಪ ಲಿಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕು ಎಂದು ಚಿತ್ರದುರ್ಗ ತಾಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಅಪರ ಜಿಲ್ಲಾಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾರದೊಳಗೆ ಕಚೇರಿ ಸ್ಥಳಾಂತರ ಮಾಡುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ ಅವರಿಗೆ ಅಪರ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಸೂಚನೆ ನೀಡಿದರು. ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ನಗರಸಭೆ ಆಯುಕ್ತೆ ರೇಣುಕಾ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸೇರಿದಂತೆ ಸಮಾಜದ ಮುಖಂಡರಾದ ಗೋಪಾಲಸ್ವಾಮಿ ನಾಯಕ, ಎಸ್.ಸಂದೀಪ್, ಜಿಲ್ಲಾನಾಯಕ ನೌಕರರ ಸಂಘದ ಅಧ್ಯಕ್ಷ ಡಾ.ಎಚ್ ಗುಡ್ಡದೇಶ್ವರಪ್ಪ ಸೇರಿದಂತೆ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.