ಹೊಸರಿತ್ತಿ ಗಾಂಧಿ ಗ್ರಾಮೀಣ ಗುರುಕುಲಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

KannadaprabhaNewsNetwork |  
Published : Sep 30, 2024, 01:17 AM IST
೨೭ಎಚ್‌ವಿಆರ್೩ | Kannada Prabha

ಸಾರಾಂಶ

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಆಯ್ಕೆಯಾಗಿವೆ.

ಹಾವೇರಿ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಆಯ್ಕೆಯಾಗಿವೆ.ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪೃಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮಹತ್ಸಾಧನೆ ಮಾಡಿದ ಮಹನೀಯರು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರವು ೨೦೧೪ರಲ್ಲಿ ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ಸ್ಥಾಪಿಸಿ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಶಸ್ತಿ ಫಲಕ ಹಾಗೂ ರು.೫ ಲಕ್ಷ ನಗದು ಒಳಗೊಂಡಿರುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ೨೦೧೪ ರಿಂದ ಪ್ರದಾನ ಮಾಡುತ್ತಾ ಬಂದಿದೆ. ೨೦೨೩ ರ ವರೆಗೆ ೮ ವ್ಯಕ್ತಿಗಳು ಹಾಗೂ ೨ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ೨೦೨೪ನೇ ಸಾಲಿನ ಪ್ರಶಸ್ತಿಯು ಪ್ರೊ. ಜಿ.ಬಿ. ಶಿವರಾಜು ಮತ್ತು ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಅ.೨ರಂದು ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಿಲ್ಲೆ ಹೊಸರಿತ್ತಿ ಗ್ರಾಮದ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ೧೯೮೪ರಲ್ಲಿ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನವು ಸ್ಥಾಪಿಸಿದ ಗಾಂಧೀ ಗ್ರಾಮೀಣ ಗುರುಕುಲ ವಸತಿ ಶಾಲೆಯು ಕಳೆದ ೩೯ ವರ್ಷಗಳಿಂದ ಗಾಂಧಿ ವಿಚಾರಗಳನ್ನು ಹೊಸ ಪೀಳಿಗೆಯಲ್ಲಿ ಅಳವಡಿಸಲು ಅಹರ್ನಿಶಿ ದುಡಿಯುತ್ತಿದೆ. ಗಾಂಧೀ ಗ್ರಾಮೀಣ ಗುರುಕುಲ ವಸತಿ ಶಾಲೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ೫ ರಿಂದ ೧೦ ನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಸಮಾಜದ ಎಲ್ಲಾ ವರ್ಗಗಳು ಸೇರಿದಂತೆ ಗ್ರಾಮೀಣ ಕೃಷಿಕ ಹಾಗೂ ಕೂಲಿಕಾರರ ಕುಟುಂಬದ ಹಿನ್ನೆಲೆಯ ಸಾವಿರಾರು ಪ್ರತಿಭಾವಂತ ಮಕ್ಕಳಿಗೆ ಊಟ, ವಸತಿ, ಇತರೆ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ.ಇಲ್ಲಿನ ವಿದ್ಯಾರ್ಥಿಗಳು ತಾವೇ ನೇಯ್ದ ಬಟ್ಟೆಗಳನ್ನು ಧರಿಸುತ್ತಾರೆ. ತಾವೇ ಬೆಳೆದ ಕೃಷಿ ಬೆಳೆಗಳಿಂದ ತಯಾರಿಸಿದ ಆಹಾರ ಸೇವಿಸುತ್ತಾರೆ. ರಾಜ್ಯ ಪಠ್ಯಕ್ರಮದ ಜೊತೆಗೆ ಗಾಂಧೀ ವಿಚಾರಧಾರೆಯ ಅನುಸಾರ ಕೃಷಿ, ನೂಲು ಮತ್ತು ನೇಯ್ಗೆ, ಹೈನುಗಾರಿಕೆ, ತೋಟಗಾರಿಕೆ ಮುಂತಾದ ಸ್ವಾವಲಂಬಿ, ಪ್ರಾಯೋಗಿಕ ಶಿಕ್ಷಣವನ್ನು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇಲ್ಲಿ ಶಿಕ್ಷಣ ಪಡೆದ ಹಲವಾರು ವಿದ್ಯಾರ್ಥಿಗಳು ಅತ್ಯುತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಂಸ್ಥೆಯು ಶಿಕ್ಷಣದ ಜೊತೆಗೆ ಜೀವನ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಅ.೨ರಂದು ಸಂಜೆ ೪.೩೦ಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಸೌಧದ ಸುಲೋಚನಾ ಸಭಾಂಗಣದಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!