ಸಿಇಟಿ ಪರೀಕ್ಷೆಯಲ್ಲಿ ಪಾವಿತ್ರ್ಯತೆ ಕಾಪಾಡಿ: ಡಿಸಿ ಗಂಗೂಬಾಯಿ

KannadaprabhaNewsNetwork | Published : Apr 13, 2024 1:00 AM

ಸಾರಾಂಶ

ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ ಕಾರವಾರದಲ್ಲಿ 3, ಕುಮಟಾದಲ್ಲಿ 2, ಹೊನ್ನಾವರದಲ್ಲಿ 2, ಶಿರಸಿಯಲ್ಲಿ 3 ಸೇರಿದಂತೆ ಒಟ್ಟೂ 11 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, 4395 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಕಾರವಾರ: ಜಿಲ್ಲೆಯಲ್ಲಿ ಏ. 18 ಮತ್ತು 19ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಎಂಜಿನಿಯರಿಗ್, ವೈದ್ಯಕೀಯ, ಕೃಷಿ ಮತ್ತು ಇನ್ನಿತರ ವೃತ್ತಿಪರ ಕೋರ್ಸ್‌ಗಳಿಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ, ಪರೀಕ್ಷಾ ಪಾವಿತ್ರ್ಯತೆಗೆ ಭಂಗವಾಗುವ ಯಾವುದೇ ಘಟನೆಗಳು ನಡೆಯದಂತೆ ಪರೀಕ್ಷೆಗಳು ಸುಗಮ ಮತ್ತು ಪಾರದರ್ಶಕವಾಗಿ ನಡೆಯುವಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಿಇಟಿ ಪರೀಕ್ಷೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ ಕಾರವಾರದಲ್ಲಿ 3, ಕುಮಟಾದಲ್ಲಿ 2, ಹೊನ್ನಾವರದಲ್ಲಿ 2, ಶಿರಸಿಯಲ್ಲಿ 3 ಸೇರಿದಂತೆ ಒಟ್ಟೂ 11 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, 4395 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವ ಮೂಲಕ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜತೆಗೆ ಬಿಸಿಲಿನ ಬೇಗೆ ಹೆಚ್ಚಿರುವ ಕಾರಣ ವೈದ್ಯಕೀಯ ಸಿಬ್ಬಂದಿ ಇರುವಂತೆ ನೋಡಿಕೊಳ್ಳಬೇಕು ಎಂದರು.

ಪರೀಕ್ಷಾ ಕೇಂದ್ರದೊಳಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಪಾಲಿಸುವಂತೆ ತಿಳಿಸಿದ ಅವರು, ವಿದ್ಯಾರ್ಥಿಗಳು ಯಾವುದೇ ರೀತಿಯ ಕೈಗಡಿಯಾರ ಧರಿಸಿರಬಾರದು. ಕಿವಿ ತಲೆ ಮುಚ್ಚದಂತೆ ವಸ್ತ್ರವನ್ನು ಧರಿಸಿರಬೇಕು. ಉದ್ದ ತೋಳಿದ್ದರೆ ಮಡಚಬೇಕು. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ. ಶೂಗಳನ್ನು ಧರಿಸುವಂತಿಲ್ಲ ಈ ಬಗ್ಗೆ ಕೊಠಡಿ ಮೇಲ್ವಿಚಾರಕರು ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದು ಸೂಚಿಸಿದರು.

ಡಿಎಚ್ಓ ಡಾ. ನೀರಜ್ ಬಿ.ವಿ., ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ ನಾಯ್ಕ ಹಾಗೂ ಪರಿಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಇದ್ದರು.

Share this article