ಕನ್ನಡಪ್ರಭ ವಾರ್ತೆ ಶಿವಮೊಗ್ಗ ಭ್ಯೂಣಹತ್ಯೆ ಅಪರಾಧ ಕೃತ್ಯವಾಗಿದ್ದು, ಇದಕ್ಕೆ ಕಠಿಣ ಶಿಕ್ಷೆ ಇದ್ದರೂ ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಗೌಪ್ಯವಾಗಿ ನಿರಂತರವಾಗಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆಚರಣದಲ್ಲಿ ಗುರುವಾರ ಏರ್ಪಡಿಸಿದ್ದ ಪ್ರಸವಪೂರ್ವ ಲಿಂಗಪತ್ತೆ, ಭ್ರೂಣಹತ್ಯೆ ಮತ್ತು ಸ್ಕ್ಯಾನಿಂಗ್ ಸೆಂಟರ್ಗಳ ಕಾರ್ಯವೈಖರಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾಗಿದ್ದ ಸ್ಕ್ಯಾನಿಂಗ್ ಸೆಂಟರ್‌ಗಳು ಸರ್ಕಾರದ ನಿಯಮಗಳನ್ನು ನಿರ್ಲಕ್ಷಿಸಿ ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ ಎಂದು ತಾಕೀತು ಮಾಡಿದರು.
ಆರೋಗ್ಯ ಇಲಾಖಾ ಅಧಿಕಾರಿಗಳು ಹಾಗೂ ಸಲಹಾ ಸಮಿತಿ ಸದಸ್ಯರು ವಾರಕ್ಕೊಮ್ಮೆಯಂತೆ ನಗರ ವ್ಯಾಪ್ತಿಯಲ್ಲಿ ಮಾತ್ರವಲ್ಲದೇ ಜಿಲ್ಲೆಯ ತಾಲೂಕುಗಳ ಸ್ಕ್ಯಾನಿಂಗ್ ಸೆಂಟರ್‌ಗಳಗೆ ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿ, ದಾಖಲೆಗಳನ್ನು ಪರಿಶೀಲಿಸಿ, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಿದರು.ಆರೋಗ್ಯ ಇಲಾಖೆ ಅಧಿಕಾರಿ-ಸಿಬ್ಬಂದಿ ಜೊತೆಗೆ ಆಶಾ, ಅಂಗನವಾಡಿ ಕಾರ್ಯಕರ್ತರ ಸಹಕಾರ ಪಡೆದುಕೊಳ್ಳಬೇಕು. ಆಶಾ ಕಾರ್ಯಕರ್ತೆಯರು ಸ್ಥಳೀಯವಾಗಿರುವ ಅನೇಕ ವಿಷಯಗಳನ್ನು ಬಲ್ಲವರಾಗಿರುತ್ತಾರೆ. ಸ್ಕ್ಯಾನಿಂಗ್ ನಂತರ ಕೆಲವೇ ದಿನಗಳಲ್ಲಿ ಗರ್ಭಪಾತ ಆಗಿರುವ ಪ್ರಕರಣಗಳ ಮೂಲ ಹಾಗೂ ಕಾರಣಗಳನ್ನು ಹುಡುಕಿದಾಗ ವಾಸ್ತವದ ಅರಿವಾಗಲಿದೆ. ಅವರು ನೀಡುವ ಕಾರಣ ಸಕಾರಣವಲ್ಲ ಎಂದು ತಿಳಿದಾಗ, ಅಂತಹ ಗರ್ಭಪಾತಕ್ಕೆ ಸಹಕರಿಸಿದ ವೈದ್ಯರು, ಸ್ಕ್ಯಾನಿಂಗ್ ಸೆಂಟರ್ ನಿರ್ವಾಹಕರು ಮತ್ತು ಅಂತಹ ಕುಟುಂಬಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದು ತಿಳಿಸಿದರು.
ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಕೇಂದ್ರದಲ್ಲಿ ಕ್ಯಾಮರಾಗಳನ್ನು ಅಳವಡಿಸಿರಬೇಕು. ಭ್ರೂಣ ಪತ್ತೆ ಮಾಡದಿರುವ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು. ಮುಂತಾದ ಮಾಹಿತಿಗಳಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಸ್ಕ್ಯಾನಿಂಗ್ ಸೆಂಟರ್‍ಗಳ ನಿರ್ವಾಹಕರು ಸಕಾಲದಲ್ಲಿ ತಮ್ಮ ಘಟಕದ ಪರವಾನಗಿ ನವೀಕರಣ ಮತ್ತು ನಿರ್ವಹಿಸಿದ ದಾಖಲೆಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಸಲ್ಲಿಸಬೇಕು. ಇದರಲ್ಲಿ ನಿರ್ಲಕ್ಷ್ಯ ತೋರುವ ಘಟಕಗಳ ಪರವಾನಿಗೆಯನ್ನು ರದ್ದುಗೊಳಿಸುವ ಕಠಿಣ ನಿರ್ಧಾರ ಕೈಗೊಳ್ಳಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ವೈದ್ಯರು ಹಾಗೂ ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ಕೆಲವು ಕಡೆಗಳಲ್ಲಿ ಆಯುಷ್ ಇಲಾಖೆಯ ವೈದ್ಯರು ಆಯುಷ್ ಬದಲಾಗಿ ಆಲೋಪತಿ ಚಿಕಿತ್ಸೆ ನೀಡುತ್ತಿರುವ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಆರೋಪ ಕೇಳಿಬರುತ್ತಿವೆ. ಈ ಬಗ್ಗೆ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಗಮನಿಸಿ ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ವೆಂಕಟೇಶ್, ಡಾ. ಮಂಜುನಾಥ ನಾಗಲೀಕರ್, ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.- - - -14ಎಸ್‌ಎಂಜಿಕೆಪಿ02:
ಸಭೆಯಲ್ಲಿ ಡಿಸಿ ಡಾ. ಆರ್.ಸೆಲ್ವಮಣಿ ಮಾತನಾಡಿದರು.