ಗವಿಸಿದ್ದೇಶ್ವರ ಜಾತ್ರೆಗೆ ಸಕಲ ಸಿದ್ಧತೆ ಕೈಗೊಳ್ಳಿ

KannadaprabhaNewsNetwork |  
Published : Dec 12, 2025, 02:30 AM IST
11ಕೆಪಿಎಲ್1:ಕೊಪ್ಪಳ ನಗರದ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. | Kannada Prabha

ಸಾರಾಂಶ

ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧವಾದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಕೊಪ್ಪಳ: ಇಲ್ಲಿಯ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜ. 5ರಂದು ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧವಾದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಜನರಿಗೆ ಕುಡಿಯುವ ನೀರು, ವಾಹನಗಳಿಗೆ ಪಾರ್ಕಿಂಗ್, ಜಾತ್ರೆಗೆ ವಿದ್ಯುತ್ ವ್ಯವಸ್ಥೆ ಇತರ ಮೂಲಭೂತ ಸೌಕರ್ಯ ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜಾತ್ರೆ ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ಜರುಗುವಂತೆ ಜಿಲ್ಲಾಡಳಿತದಿಂದ ಸಕಲ ರೀತಿಯ ಸಹಕಾರ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗುವುದು ಎಂದರು.

ರಥೋತ್ಸವ ಮತ್ತು ಇನ್ನುಳಿದ ದಿನಗಳಲ್ಲಿಯೂ ಪ್ರತಿ ದಿನ ಲಕ್ಷಾಂತರ ಭಕ್ತರು ಮಠಕ್ಕೆ ಆಗಮಿಸುತ್ತಾರೆ. ಸೂಕ್ತ ಪೊಲೀಸ್ ಭದ್ರತೆ ಜತೆಗೆ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು. ಮಠದ ಆವರಣದಲ್ಲಿ ಆ್ಯಂಬುಲೆನ್ಸ್‌ ಮತ್ತು ಅಗ್ನಿಶಾಮಕ ವಾಹನಗಳನ್ನು ಕಾಯ್ದಿರಿಸಬೇಕು. ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್‌ ಸಂಚರಿಸಲು ಅನುಕೂಲವಾಗುವಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ಜಾತ್ರೋತ್ಸವ ಹಿನ್ನೆಲೆಯಲ್ಲಿ ನಿರಂತರ ದಾಸೋಹ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ನಗರಸಭೆಯ ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಪೌರ ಕಾರ್ಮಿಕರ ನಿಯೋಜನೆ ಮತ್ತು ಕುಡಿಯುವ ನೀರಿನ ಸೌಕರ್ಯಕ್ಕೆ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಜಾತ್ರೆಯಲ್ಲಿ ವಿದ್ಯುತ್ ಅವಘಡಗಳಾಗದಂತೆ ಜೆಸ್ಕಾಂ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಮಹಾದಾಸೋಹಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ. ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಆಹಾರ ಸುರಕ್ಷಾ ಅಧಿಕಾರಿಗಳು ಗವಿಮಠದ ಅಡುಗೆ ಸಿಬ್ಬಂದಿಯೊಂದಿಗೆ ವಿಶೇಷ ಸಭೆ ನಡೆಸಿ ಆಹಾರ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಾತ್ರೆ ನಡೆಯುವ ಸ್ಥಳದಲ್ಲಿ ತುರ್ತು ಆರೋಗ್ಯ ಘಟಕ ಸ್ಥಾಪಿಸಿ, ಕರ್ತವ್ಯಕ್ಕೆ ತಜ್ಞವೈದ್ಯರು ಮತ್ತು ಶುಶ್ರೂಕಿಯರನ್ನು ನಿಯೋಜಿಸಬೇಕು. ಮಹಾದಾಸೋಹ ಸಂಪರ್ಕ ರಸ್ತೆಗಳು, ಜಾತ್ರಾ ಅಂಗಡಿ, ತೇರು ಸಾಗುವ ಆವರಣ, ವಾಹನ ಪಾರ್ಕಿಂಗ್ ಸ್ಥಳಗಳಲ್ಲಿ ಕಸ ವಿಲೇವಾರಿ ಮಾಡಿ, ಧೂಳು ಬಾರದಂತೆ ನೀರು ಸಿಂಪಡಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಿ, ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುವುದು. ಇದರ ಜತೆಗೆ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮತ್ತು ಟ್ರಾಫಿಕ್ ಸಮಸ್ಯೆಗಳಾಗದಂತೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಿ, ಅದರ ಮಾಹಿತಿಯನ್ನು ಮುಂಚಿತವಾಗಿ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶ ಜಗದೀಶ, ಕೊಪ್ಪಳ ತಹಸೀಲ್ದಾರ್‌ ವಿಠ್ಠಲ್ ಚೌಗಲಾ, ಕೊಪ್ಪಳ ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ