ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾ. 18ರಿಂದ ಏ. 2ರವರೆಗೆ ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಬಾರಿಯ ಜಿಲ್ಲೆಯಲ್ಲಿ ಒಟ್ಟು 19,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಕನ್ನಡಪ್ರಭ ವಾರ್ತೆ ಕಾರವಾರ
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೊಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಕುರಿತಂತೆ, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸುವಂತೆ ಮತ್ತು ಯಾವುದೇ ವಿದ್ಯಾರ್ಥಿ ಗೈರು ಹಾಜರಾಗದಂತೆ ಎಚ್ಚರ ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತ ಪೂರ್ವ ಸಿದ್ಧಾತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾ. 18ರಿಂದ ಏ. 2ರವರೆಗೆ ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಬಾರಿಯ ಜಿಲ್ಲೆಯಲ್ಲಿ ಒಟ್ಟು 19,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಿಗೆ ಈ ಬಾರಿ ಶಿಕ್ಷಣ ಇಲಾಖೆ ವತಿಯಿಂದ ಉತ್ತಮ ರೀತಿಯಲ್ಲಿ ತರಬೇತಿ ನೀಡಿದ್ದು, ಪರೀಕ್ಷೆಗೆ ಹಾಜರಾದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತೀರ್ಣರಾಗುವ ರೀತಿಯಲ್ಲಿ ಅವರನ್ನು ಸಿದ್ದಗೊಳಿಸಲಾಗಿದ್ದು, ಪರೀಕ್ಷಾ ಹಾಜರಾತಿಯು ಶೇ.100 ಆದಲ್ಲಿ ಫಲಿತಾಂಶವು ಶೇ.100 ಬರಬಹುದಾದ ಎಲ್ಲಾ ಸಾಧ್ಯತೆಗಳಿರುವ ಕಾರಣ, ಯಾವುದೇ ವಿದ್ಯಾರ್ಥಿ ಗೈರು ಹಾಜರಾಗದಂತೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ತಿಳಿಸಿದರು.ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾದ ಮಾರ್ಗದಲ್ಲಿ ಮತ್ತು ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಒದಗಿಸುವಂತೆ ತಿಳಿಸಿದ ಅವರು, ವಿದ್ಯಾರ್ಥಿಗಳು ಸಾಕಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪುವ ನಿಟ್ಟಿನಲ್ಲಿ ಬಸ್‌ಗಳಿಗೆ ಸಮಯ ನಿಗದಿಪಡಿಸಿ ಎಂದರು. ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಮತ್ತು ಪರೀಕ್ಷಾ ಮಂಡಳಿಯು ಸೂಚಿಸಿರುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಯಾವುದೇ ಲೋಪವಾಗದಂತೆ ಪರೀಕ್ಷೆ ನಡೆಸಬೇಕು ಎಂದರು.
ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಪೊಲೀಸ್ ಭದ್ರತೆಯಲ್ಲಿ, ಜಿಪಿಎಸ್ ಅಳವಡಿಸಿದ ವಾಹನಗಳ ಮೂಲಕ ಪರೀಕ್ಷೆ ಕೇಂದ್ರಗಳಿಗೆ ತಲುಪಿಸಲು ಹಾಗೂ ಎಲ್ಲಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಹಾಗೂ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಧಿಕಾರಿ ಡಾ. ದಿಲೀಶ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲತಾ ನಾಯ್ಕ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.