ಆಹಾರ ಗುಣಮಟ್ಟ ಪರಿಶೀಲನೆ ಕಡ್ಡಾಯವಾಗಲಿ:ಡೀಸಿ

KannadaprabhaNewsNetwork |  
Published : Feb 16, 2024, 01:45 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಆಹಾರ ಸುರಕ್ಷತೆ-ಗುಣಮಟ್ಟ ಇಲಾಖೆ ಸಲಹಾ ಸಮಿತಿ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. | Kannada Prabha

ಸಾರಾಂಶ

ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ, ಶಾಲೆಗಳಿಗೆ, ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿ ತಯಾರಿಸುವ ಆಹಾರದ ಬಗ್ಗೆ ಪರಿಶೀಲಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಹಾರ ಉದ್ದಿಮೆದಾರರು ಆಹಾರ ನೋಂದಣಿ ಅಥವಾ ಆಹಾರ ಪರವಾನಿಗೆ ಪಡೆಯುವುದು ಕಡ್ಡಾಯ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಜಿಲ್ಲೆಯಲ್ಲಿರುವ ಆಹಾರ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸುವಂತೆ ಆಹಾರ ಸುರಕ್ಷತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸೇವನೆಯು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಸಾರ್ವಜನಿಕರಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ, ಶಾಲೆಗಳಿಗೆ, ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿ ತಯಾರಿಸುವ ಆಹಾರದ ಬಗ್ಗೆ ಪರಿಶೀಲಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಹಾರ ಉದ್ದಿಮೆದಾರರು ಆಹಾರ ನೋಂದಣಿ ಅಥವಾ ಆಹಾರ ಪರವಾನಿಗೆ ಪಡೆಯುವುದು ಕಡ್ಡಾಯ, ಪರವಾನಗಿ ಪಡೆಯದೇ ನಡೆಸುವ ಆಹಾರ ಉದ್ದಿಮೆಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಉದ್ದಿಮೆ ಸ್ಥಳಗಳಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಿ, ನಿಯಮಿತವಾಗಿ ಸಂಶಯಾಸ್ಪದ ಆಹಾರ ಮಾದರಿಗಳನ್ನು ಸಂಗ್ರಹಿಸಿ ಸೂಕ್ತ ಕ್ರಮ ತೆಗೆದು ಕೊಳ್ಳಬೇಕು. ಆಹಾರ ಸೇವನೆಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಿ, ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಬೆಂಗ್ರಾ ಜಿಲ್ಲೆಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ, ಜಿಲ್ಲೆಯಲ್ಲಿ 5548 ನೋಂದಣಿ ಹಾಗೂ 1505 ಪರವಾನಿಗೆ ಪಡೆದ ಆಹಾರ ಉದ್ದಿಮೆಗಳು ಇವೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಪ್ರವೀಣ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಆಹಾರ ಸುರಕ್ಷತ ಅಧಿಕಾರಿಗಳು ಉಪಸ್ಥಿತರಿದ್ದರು.

ಕಳಪೆ ಗುಣಮಟ್ಟ ಕಂಡುಬಂದರೆ ದೂರು ನೀಡಿ

ಜಿಲ್ಲಾವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಯಾವುದಾದರೂ ಸಮಸ್ಯೆಗಳು ಕಂಡುಬಂದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ (9901961771), ಹೊಸಕೋಟೆ ತಾಲೂಕು ಆಹಾರ ಸುರಕ್ಷತೆ ಅಧಿಕಾರಿ ಗೋವಿಂದರಾಜು (9845511663), ದೊಡ್ಡಬಳ್ಳಾಪುರ ತಾಲೂಕು ಆಹಾರ ಸುರಕ್ಷತಾ ಅಧಿಕಾರಿ ನಾಗೇಶ್ (9731837210), ದೇವನಹಳ್ಳಿ ತಾಲೂಕು ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ (8884393910), ನೆಲಮಂಗಲ ತಾಲೂಕು ಆಹಾರ ಸುರಕ್ಷತಾ ಅಧಿಕಾರಿ ರವಿಕುಮಾರ್ (9845580486) ಇವರನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ