ಮೈಸೂರು: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಪ್ರಗತಿಯನ್ನು ಸಾಧಿಸಬೇಕು ಎಂದು ಮೈಸೂರು ತಾಪಂ ಆಡಳಿತಾಧಿಕಾರಿಯಾದ ಬಿ.ಎಂ. ಸವಿತಾ ತಿಳಿಸಿದರು.
ಇಲಾಖೆಗಳು ರೂಪಿಸಿರುವ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಅದರಂತೆ ನಿಯಮಾನುಸಾರ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಜೊತೆಗೆ ಸರ್ಕಾರದ ಕಾರ್ಯಕ್ರಮಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ತಾಲೂಕು ಅಭಿವೃದ್ಧಿಯಲ್ಲಿ ಹಿಂದುಳಿಯಬಾರದು ಎಂದು ಅವರು ಹೇಳಿದರು.
ಮಳೆಗಾಲ ಪ್ರಾರಂಭವಾಗಿದ್ದು, ಆರೋಗ್ಯ ಇಲಾಖೆಯು ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಡೆಂಘೀ, ಮಲೇರಿಯಾದಂತಹ ಕಾಯಿಲೆಗಳ ಕುರಿತು ಜನರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.ಹಿಂದುಳಿತ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಡುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸುವ ವಾತಾವರಣ ಕಲ್ಪಿಸಬೇಕು. ವಿದ್ಯಾರ್ಥಿ ನಿಲಯಗಳಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಕಾರ್ಯಾಗಾರ ಆಯೋಜಿಸಬೇಕು. ಈ ಮುಖೇನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂಲವಾಗುವ ವಿಷಯಗಳ ಬಗ್ಗೆ ಮಾಹಿತಿ ಒದಗಿಸಿ ಎಂದರು.
ತಾಪಂ ಇಒ ಸಿ. ಕೃಷ್ಣ ಮಾತನಾಡಿ, ಮಂಗಾರು ಮಳೆ ಉತ್ತಮವಾಗಿ ಬೀಳುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆ ಕೃಷಿ ಇಲಾಖೆಯು ರೈತರಿಗೆ ಅನುಕೂಲವಾಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು. ಬಿತ್ತನ ಬೀಜ, ರಸಗೊಬ್ಬರವನ್ನು ಸಕಾಲಕ್ಕೆ ವಿತರಿಸಬೇಕು ಎಂದರು.
ತಾಲೂಕಿನಲ್ಲಿ ಅಂಗನವಾಡಿ ನಿರ್ಮಾಣ ಹಾಗೂ ಬೂದು ನೀರು ನಿರ್ವಹಣೆ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸಿ. ಗ್ರಾಮ ಪಂಚಾಯಿತಿಗಳ ಸಮನ್ವಯದೊಂದಿಗೆ ಸರ್ಕಾರದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು ಎಂದು ಅವರು ತಿಳಿಸಿದರು.ಸಹಾಯಕಲೆಕ್ಕಾಧಿಕಾರಿ ಭೈರಪ್ಪ, ಸಹಾಯಕ ಯೋಜನಾಧಿಕಾರಿ ಸುರೇಶ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.