ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ

KannadaprabhaNewsNetwork |  
Published : Aug 01, 2025, 12:30 AM IST
28ಸಿಎಚ್‌ಎನ್‌53ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ಪೂರ್ವಭಾವಿ ಸಭೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ನಡೆಸಿದರು. | Kannada Prabha

ಸಾರಾಂಶ

ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಆ. 15ರಂದು ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚಿಸಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಆ. 15ರಂದು ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಂದಿನಂತೆ ಈ ಬಾರಿಯು ಸ್ವಾತಂತ್ರ್ಯೋತ್ಸವವನ್ನು ಯಾವುದೇ ಲೋಪವಿಲ್ಲದೇ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು. ಆ. 15ರಂದು ಬೆಳಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ, ಪಥಸಂಚಲನ ಹಾಗೂ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಕಲ ಸಿದ್ದತೆಗಳನ್ನು ಆರಂಭಿಸುವಂತೆ ತಿಳಿಸಿದರು.

ಪಥಸಂಚಲನ ತಾಲೀಮು ನಡೆಸಬೇಕು. ಉತ್ತಮ ತಂಡಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳು ಪೊಲೀಸ್, ಅರಣ್ಯ ಇಲಾಖೆ, ಇನ್ನಿತರ ಇಲಾಖೆಗಳು ಪಥಸಂಚಲನದಲ್ಲಿ ಪಾಲ್ಗೊಳ್ಳಬೇಕಿದ್ದು ತಂಡಗಳು ಪೂರ್ವ ಸಿದ್ದತೆ ಕೈಗೊಳ್ಳಬೇಕು. ಸ್ವಾತಂತ್ರ್ಯ ಹೋರಾಟ ಹಾಗೂ ದೇಶಪ್ರೇಮ ವಿಷಯಗಳನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದರು.

ಕ್ರೀಡಾಂಗಣವನ್ನು ಸ್ವಚ್ಚತೆ ಮಾಡಬೇಕು. ಕುಡಿಯುವ ನೀರು, ಸಿಹಿ ವಿತರಣೆ, ಆಹ್ವಾನ ಪತ್ರಿಕೆ ಮುದ್ರಣ, ವಿತರಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ, ಆಂಬುಲೆನ್ಸ್ ಸನ್ನದ್ಧವಾಗಿಡಬೇಕು. ಪ್ಲಾಸ್ಟಿಕ್ ಧ್ವಜ ಬಳಕೆ ನಿಷೇಧಿಸಲಾಗಿದ್ದು, ಪ್ಲಾಸ್ಟಿಕ್ ಧ್ವಜ ನಿಯಂತ್ರಣಕ್ಕಾಗಿ ಎಲ್ಲಾ ಆರ್.ಟಿ.ಒ ಹಾಗೂ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು.

ಎಲ್ಲಾ ಸರ್ಕಾರಿ ಕಚೇರಿ, ಗ್ರಾಮ ಪಂಚಾಯಿತಿಗಳು, ಬ್ಯಾಂಕ್‌ಗಳು, ಕೇಂದ್ರ ಸರ್ಕಾರದ ಅಧೀನ ಕಚೇರಿಗಳು, ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನ ಆಚರಣೆ ಮಾಡಬೇಕು. ಲೀಡ್ ಬ್ಯಾಂಕ್ ವ್ಯವಸ್ಥಾಪಕರು ತಮ್ಮ ವ್ಯಾಪ್ತಿಯ ಎಲ್ಲಾ ಬ್ಯಾಂಕುಗಳಲ್ಲಿ ಸ್ವಾತಂತ್ರ್ಯ ದಿನ ಆಚರಣೆಗೆ ಸೂಚನೆ ನೀಡಬೇಕು. ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರ ಮಾಡಬೇಕು. ಎಲ್ಲಾ ಅಧಿಕಾರಿ, ಸಿಬ್ಬಂದಿ ಸ್ವಾತಂತ್ರ್ಯ ದಿನ ಆಚರಣೆಯಲ್ಲಿ ಹಾಜರಾಗಬೇಕು ಎಂದು ನಿರ್ದೇಶನ ನೀಡಿದರು. ವೇದಿಕೆ ಸಮಿತಿ, ಅಲಂಕಾರ ಸಮಿತಿ, ಪೆರೇಡ್ ಸಮಿತಿ, ಸ್ವಾಗತ ಸಮಿತಿ, ಸಾಂಸ್ಕೃತಿಕ ಸಮಿತಿ, ಧ್ವಜಾ ಸಿದ್ದತಾ ಸಮಿತಿ, ಸ್ವಚ್ಚತೆ ಮತ್ತು ಕುಡಿಯುವ ನೀರಿನ ಸಮಿತಿ ಸೇರಿದಂತೆ ಕಾರ್ಯಕ್ರಮ ನಿರ್ವಹಣೆಗೆ ನಿಯೋಜನೆಯಾಗಿರುವ ಉಪಸಮಿತಿಗಳು ನಿಗದಿಪಡಿಸಿರುವ ಕಾರ್ಯಗಳನ್ನು ಯಾವುದೇ ನ್ಯೂನ್ಯತೆಗಳಿಲ್ಲದೇ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಡಿವೈಎಸ್‌ಪಿ ಸೋಮಣ್ಣ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಯೋಗಾನಂದ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪುಟ್ಟಗೌರಮ್ಮ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಂಜುಂಡಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ