ಲೋಕಸಭಾ ಚುನಾವಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

KannadaprabhaNewsNetwork | Published : Mar 11, 2024 1:24 AM

ಸಾರಾಂಶ

ಚೆಕ್ ಪೋಸ್ಟ್ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದರ ಜತೆಗೆ ಅಲ್ಲಿನ ಸಿಬ್ಬಂದಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು

ಕಾರವಾರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.

ಕುಮಟಾ ತಹಸೀಲ್ದಾರ್ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಸೀಲ್ದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಎಲ್ಲ ಅಗತ್ಯ ಮೂಲ ಸೌಕರ್ಯ ಇರುವ ಬಗ್ಗೆ ಪರಿಶೀಲಿಸಿ ದೃಢೀಕರಣ ನೀಡಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗೆ ಸೂಕ್ತ ತರಬೇತಿ ಆಯೋಜಿಸಬೇಕು ಎಂದರು.

ತಮ್ಮ ವ್ಯಾಪ್ತಿಯಲ್ಲಿನ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಬಗ್ಗೆ ಮಾಹಿತಿ ಸಲ್ಲಿಸಿ ಅಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. 85 ವರ್ಷ ಮೇಲ್ಪಟ್ಟ ಮತದಾರರು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಮತಪತ್ರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು.ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಸೀಲ್ದಾರರು ಸಿ-ವಿಜಿಲ್, ಮಾದರಿ ನೀತಿ ಸಂಹಿತೆ ತಂಡ, ದೂರು ಮಾಹಿತಿ ಸಂಗ್ರಹ ತಂಡ, ಸುವಿಧಾ ವೆಬ್ ಪೋರ್ಟಲ್ ನಲ್ಲಿ ನೋಡಿಕೊಳ್ಳಲು, ವಾಹನಗಳಿಗೆ ಅನುಮತಿ, ರಾಜಕೀಯ/ಸಾಂಸ್ಕೃತಿಕ/ಧಾರ್ಮಿಕ/ಸಾಮಾಜಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಸಲುವಾಗಿ ಸಿಬ್ಬಂದಿಯ ತಂಡ ರಚಿಸಿ ದೂರುಗಳು ಬಾರದಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಸೂಕ್ತ ಸ್ಥಳಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿವಂತೆ ಸೂಚಿಸಿದ ಅವರು, ಅಲ್ಲಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದರ ಜತೆಗೆ ಅಲ್ಲಿನ ಸಿಬ್ಬಂದಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ ರಾಜಪೂತ, ಉಪ ವಿಭಾಗಾಧಿಕಾರಿಗಳಾದ ಕನಿಷ್ಕ, ಅಪರ್ಣಾ ರಮೇಶ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠ ಸಿ.ಟಿ.ಜಯಕುಮಾರ ಇದ್ದರು.

ಸಭೆಯ ನಂತರ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share this article