ಗದಗ: ಜಿಲ್ಲಾ ಮಟ್ಟದಲ್ಲಿ ಜ. ೨೬ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ವೈಶಾಲಿ. ಎಂ. ಎಲ್. ಸೂಚನೆ ನೀಡಿದರು.
ಗಣರಾಜ್ಯೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆಳಗ್ಗೆ ೭.೩೦ರೊಳಗೆ ನೆರವೇರಿಸಿ ೮.೩೦ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು. ಅಂದು ಬೆಳಗ್ಗೆ ೯ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಜರುಗಲಿದ್ದು, ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಹಾಗೂ ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಪ್ರಕಾರ ಮುದ್ರಿಸಿ ಗಣ್ಯರುಗಳಿಗೆ ಸಾಕಷ್ಟು ಸಮಯದ ಮುಂಚಿತವಾಗಿ ತಲುಪಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಲು ನಿರ್ದೇಶನ ನೀಡಿದರು.ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ, ಮೂಲಭೂತ ಸೌಕರ್ಯಗಳ ವ್ಯವಸ್ಥೆ, ವೇದಿಕ ನಿರ್ಮಾಣ ಕುರಿತ ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು.