ವಿಕಲಚೇತನರಿಗೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿ: ಜಿಲ್ಲಾಧಿಕಾರಿ

KannadaprabhaNewsNetwork | Published : Jan 7, 2024 1:30 AM

ಸಾರಾಂಶ

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚನೆ ನೀಡಿದರು.

- ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಕಲಚೇತನರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಯೋಜನೆಗಳ ಮಾಹಿತಿ ನೀಡಿದರೆ ಸರ್ಕಾರದ ಸವಲತ್ತು ವಿಕಲಚೇತನರು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಅವರಿಗೆ ತಾಲೂಕು ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದ ಅವರು, ವಿಕಲಚೇತನರ ಗುರುತಿನ ಚೀಟಿ (ಯುಡಿಐಡಿ)ಯನ್ನು ಕಡ್ಡಾಯವಾಗಿ ನೀಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜಾನಾಯ್ಕ ಸಭೆಗೆ ಮಾಹಿತಿ ನೀಡಿ, ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಸಂಬಂಧ ವಿಕಲಚೇತನರೆಂದು ಗುರುತಿಸಿಕೊಳ್ಳುವವರು ಯು.ಡಿ.ಐ.ಡಿ ವೆಬ್ ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಹೀಗೆ ನೋಂದಾಯಿತ ಅರ್ಜಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಪಾಸಣೆಗೊಳಪಟ್ಟು ಅವರು ವಿಕಲಚೇತನರೆಂದು ಕಂಡು ಬಂದರೆ ಜಿಲ್ಲಾಸ್ಪತ್ರೆ ಮೂಲಕ ವಿಶಿಷ್ಠ ಗುರುತಿನ ಚೀಟಿಗಳು ನೇರವಾಗಿ ವಿಕಲಚೇತನರ ಮನೆಗೆ ಅಂಚೆ ಮೂಲಕ ತಲುಪುತ್ತವೆ. ಜಿಲ್ಲೆಯಲ್ಲಿ 14 ಸಾವಿರಕ್ಕೂ ಹೆಚ್ಚು ವಿಕಲಚೇತನರಿಗೆ ಯು.ಡಿ.ಐ.ಡಿ ಗುರುತಿನ ಚೀಟಿ ವಿತರಿಸಲಾಗಿದೆ ಎಂದು ಹೇಳಿದರು.

2022-23 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಲಿಮ್ಕೋ ಸಹಯೋಗದಲ್ಲಿ ಜಿಲ್ಲೆಯ ಸರ್ವ ಶಿಕ್ಷಣ ಅಭಿಯಾನದಡಿ ಕಾರ್ಯಕ್ರಮ, ರೋಟರಿ ಸಂಸ್ಥೆ ಸಹಭಾಗಿತ್ವದಲ್ಲಿ ಕೃತಕ ಕೈ ಕಾಲು ಜೋಡಿಸುವ ಶಿಬಿರ ಹಾಗೂ ವಿಕಲಚೇತನರ ಪೋಷಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಂಗವಿಕಲರ ಪ್ರತಿನಿಧಿ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಪೋಟೋ ಫೈಲ್‌ ನೇಮ್‌ 6 ಕೆಸಿಕೆಎಂ 1

Share this article